ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕಿನಿಂದ ಆದ ಅನಾಹುತಗಳ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ.
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತ ಹಾಗೂ ಕೆಲವು ಕಡೆ ಬೆಡ್ ಸಮಸ್ಯೆಯಿಂದಾಗಿರುವ ಅನಾಹುತಗಳು ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಮರುಕಳಿಸದಂತೆ ಸರ್ಕಾರ ಎಚ್ಚರವಹಿಸಬೇಕು ಎಂದು ಅವರು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಹಾಸನ ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಮಾತನಾಡಿರುವ ಗೌಡರು, ಜಿಲ್ಲೆಯಲ್ಲಿನ ಸಮಸ್ಯೆಗಳ ಕುರಿತು ಗಮನಕ್ಕೆ ತಂದಿದ್ದಾರೆ. ಹಾಸನ ಜಿಲ್ಲೆಯಲ್ಲೂ ವೈದ್ಯಕೀಯ ಸೌಲಭ್ಯಗಳು ಸಿಗದಿರುವ ಹಿನ್ನೆಲೆಯಲ್ಲಿ ಜನರು ಪರದಾಡುತ್ತಿದ್ದಾರೆ. ಲಸಿಕೆ, ರೆಮ್ಡೆಸಿವಿರ್ ಇಂಜೆಕ್ಷನ್ ಕೊರತೆ ಇದೆ ಈ ಬಗ್ಗೆ ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.
ದೇವೇಗೌಡರ ಮನವಿಗೆ ಸಕಾರತ್ಮಕವಾಗಿ ಸ್ಪಂದಿಸಿರುವ ಸಿಎಂ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಕುರಿತು ಸತತವಾಗಿ ದೂರವಾಣಿ ಮೂಲಕ ಮಾಹಿತಿ ಪಡೆಯುತ್ತಿದ್ದೇನೆ. ಜಿಲ್ಲಾಧಿಕಾರಿಗಳಿಗೂ ಈ ಬಗ್ಗೆ ನಾನು ಸೂಚನೆ ನೀಡಿದ್ದೇನೆ ಎಂದು ಅವರು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ