ಬೆಂಗಳೂರು: ಒಂದು ವೇಳೆ ರಾಜಿ ಮಾಡಿಕೊಂಡಿದ್ದರೆ ಮೈತ್ರಿ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಕಾಲ ಅಧಿಕಾರ ನಡೆಸಬಹುದಿತ್ತು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ವಿಚಾರ ಸಂಕಿರಣ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಅಂದು ಸ್ವಾಭಿಮಾನಕ್ಕಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟು ಹೊರ ಬಂದರು. ಒಂದು ವೇಳೆ ರಾಜಿಯಾಗಿದ್ದರೆ ಐದು ವರ್ಷ ಸಿಎಂ ಆಗಿ ಇರುತ್ತಿದ್ದರು. ಆದರೆ ಅವರು ಹಾಗೆ ಮಾಡಲಿಲ್ಲ ಎಂದರು.
ಎರಡನೇ ಬಾರಿ ಮುಖ್ಯಮಂತ್ರಿ ಸ್ಥಾನ ಸಿಕ್ಕಿದ್ದು ಅವರ ವ್ಯಕ್ತಿತ್ವಕ್ಕೆ ಸಿಕ್ಕ ಗೌರವ. 80 ಶಾಸಕರನ್ನು ಹೊಂದಿದ್ದ ಪಕ್ಷಕ್ಕೆ ಕುಮಾರಸ್ವಾಮಿ ಅವರ ವಿಶಿಷ್ಟ ಗುಣದಿಂದಲೇ ಮುಖ್ಯಮಂತ್ರಿ ಸ್ಥಾನ ನೀಡಲು ಮುಂದೆ ಬಂದರು. ಏನೇ ಸಮಸ್ಯೆಗಳು ಎದುರಾದರೂ ಉತ್ತಮ ಆಡಳಿತವನ್ನು ನೀಡಿದ್ದಾರೆ ಎಂದು ಹೇಳಿದರು. ಈ ಹಿಂದೆ ಮುಖ್ಯಮಂತ್ರಿಯಾಗಿ ಗ್ರಾಮ ವಾಸ್ತವ್ಯ, ಜನತಾ ದರ್ಶನ, ವಿಕಲಚೇತನರ ಬಗೆಗಿನ ಕಾಳಜಿ ಇವು ಜನ ಮೆಚ್ಚುಗೆಗೆ ಪಾತ್ರವಾದವು. ಅಧಿಕಾರ ಸಿಕ್ಕಾಗ ಆಡಳಿತ ನಡೆಸಬಹುದು ಎಂಬುದಕ್ಕೆ ಕುಮಾರಸ್ವಾಮಿ ಸ್ಪಷ್ಟ ನಿದರ್ಶನ ಎಂದರು.
ಇದನ್ನೂ ಓದಿ: ಇನ್ನೂ ಹತ್ತಿರ, ಹತ್ತಿರ.. ಹೆಚ್ ಡಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಮೋದಿ, ಬಿಎಸ್ವೈ
ಇತ್ತೀಚೆಗೆ ನಡೆದ ಉಪಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಆದರೆ ಉಪಚುನಾವಣೆಯೇ ಬೇರೆ, ಸಾರ್ವತ್ರಿಕ ಚುನಾವಣೆಯೇ ಬೇರೆ. ಮುಂದಿನ ಚುನಾವಣೆಗೆ ಈಗಿನಿಂದಲೇ ಸಜ್ಜಾಗಬೇಕು. ಪದಾಧಿಕಾರಿಗಳು ತಮ್ಮ ಜವಾಬ್ದಾರಿ ನಿರ್ವಹಿಸಬೇಕು. ಜಿಲ್ಲಾ ಮತ್ತು ತಾಲೂಕು ಘಟಕಗಳನ್ನು ಚುರುಕುಗೊಳಿಸಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸರಳವಾಗಿ ಹೆಚ್.ಡಿ.ಕುಮಾರಸ್ವಾಮಿ ಅವರ 61ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ, ಮಾಜಿ ಶಾಸಕ ಕೋನರೆಡ್ಡಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.