ಬೆಂಗಳೂರು: ಬಂಗಾಳದ ಉಪಸಾಗರದಲ್ಲಿ ವಾಯುಭಾರ ಕುಸಿತವಾಗುವ ಹೆಚ್ಚಿನ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 8ರಿಂದ ಜುಲೈ 12 ರವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಹಾಗೂ ಅತಿ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದೆ. ಜುಲೈ 8ರಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಜುಲೈ 9ರಿಂದ 12ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರ್ಗಿ ಜಿಲ್ಲೆೆಗಳ ಕೆಲವು ಸ್ಥಳಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 8ರಿಂದ 11ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಜುಲೈ 11ರಿಂದ 12ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಹಲವೆಡೆ ವ್ಯಾಪಕ ಮಳೆ:
ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ಸಹಜ ಸ್ಥಿತಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಗುರುವಾರ ವ್ಯಾಪಕ ಮಳೆಯಾಗಿದೆ.
ಮುಖ್ಯವಾಗಿ, ಕಲಬುರ್ಗಿಯ ಸೇಡಂ, ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 9 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 8 ಸೆಂ.ಮೀ, ಮಂಗಳೂರಿನ ಪಣಂಬೂರಿನಲ್ಲಿ 7 ಸೆಂ.ಮೀ, ಬೆಳಗಾವಿ ಜಿಲ್ಲೆಯ ಯಾದವಾಡದಲ್ಲಿ 6 ಸೆಂ.ಮೀ. ಮಳೆಯಾಗಿದೆ. ಮೂಡಬಿದ್ರೆ, ದಕ್ಷಿಣ ಕನ್ನಡದ ಉಪ್ಪಿನಂಗಡಿ, ಮಣಿ, ಗದಗದ ನರಗುಂದ, ಕೋಲಾರದ ಬಂಗಾರಪೇಟೆಯಲ್ಲಿ ತಲಾ 5 ಸೆಂ.ಮೀ, ಮಂಗಳೂರು, ಉಡುಪಿಯ ಕಾರ್ಕಳ, ಉತ್ತರ ಕನ್ನಡದ ಶಿರಾಲಿಯಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.