ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಮುನ್ಸೂಚನೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಸೆ.4 ರಿಂದ 8ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದ.ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆ ಸೆ.6,7,8 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದರು.
ಉತ್ತರ ಒಳನಾಡಿನಲ್ಲಿ ಸೆ.4-5 ರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಸೆ.6,7,8 ರಂದು ವ್ಯಾಪಕ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ಬೀದರ್, ಕಲ್ಬುರ್ಗಿ, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಸಿಎಸ್ ಪಾಟೀಲ್ ತಿಳಿಸಿದರು.
ದಕ್ಷಿಣ ಒಳನಾಡಿನಲ್ಲಿ ಸೆ.4 ರಿಂದ 8ರವರೆಗೆ ವ್ಯಾಪಕ ಮಳೆಯಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಸೆ.6 ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಮಲೆನಾಡಿನ ಜಿಲ್ಲೆಗಳನ್ನು ಸೇರಿಸಿ, ಕೋಲಾರ, ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸೆ.4,5,7 ಹಾಗೂ 8 ರಂದು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಲ್ಲಿ 4 ಹಾಗೂ 5ರಂದು ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಸಿಎಸ್ ಪಾಟೀಲ್ ತಿಳಿಸಿದರು.