ಬೆಂಗಳೂರು: ನಗರದ ಘನತ್ಯಾಜ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ ಸೋತಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ನಗರದಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಬಿಬಿಎಂಪಿ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಅಗತ್ಯ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಪಾಲಿಕೆ ಹಾಗೂ ಕೆಎಸ್ ಪಿಸಿಬಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಓದಿ: ವೇಶ್ಯಾವಾಟಿಕೆ: ಗ್ರಾಹಕನ ವಿರುದ್ಧ ಕ್ರಮ ಜರುಗಿಸಲಾಗದು ಎಂದ ಹೈಕೋರ್ಟ್
ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಹೈಕೋರ್ಟ್ ಕಳೆದ ಮಾರ್ಚ್ 17ರಂದು ವಿಚಾರಣೆ ನಡೆಸಿ, ನ್ಯಾಯಾಲಯ ಈವರೆಗೆ ನೀಡಿರುವ ನಿರ್ದೇಶನಗಳನ್ನು ಪಾಲಿಸಿರುವ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತ್ತು. ಅದರಂತೆ ಅರ್ಜಿದಾರರ ಪರ ವಕೀಲ ಜಿ.ಆರ್ ಮೋಹನ್ ವರದಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರಲ್ಲಿ ಪಾಲಿಕೆಯು ನ್ಯಾಯಾಲಯದ ಆದೇಶಗಳನ್ನು ಸೂಕ್ತ ರೀತಿಯಲ್ಲಿ ಪಾಲಿಸಿಲ್ಲ. ಹಾಗೆಯೇ, ಕೆಎಸ್ಪಿಸಿಬಿ 2016ರ ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಪಾಲಿಕೆಗೆ 73 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಈ ಹಣದಲ್ಲಿ ಟ್ರಕ್ಗಳನ್ನು ಖರೀದಿಸಿದ್ದು, ಪ್ರತಿ ಟ್ರಕ್ಗೆ 13 ಲಕ್ಷ ರೂ. ಹೆಚ್ಚುವರಿಯಾಗಿ ನೀಡಿದೆ ಎಂದು ವರದಿಯಲ್ಲಿ ಆರೋಪಿಸಿದ್ದಾರೆ. ವರದಿ ಪರಿಶೀಲಿಸಿದ ಪೀಠ ಪಾಲಿಕೆ ಹಾಗೂ ಕೆಎಸ್ ಪಿಸಿಬಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆಯಲ್ಲದೇ, ವರದಿಗೆ ಲಿಖಿತ ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಜೂನ್ 15ಕ್ಕೆ ಮುಂದೂಡಿದೆ.