ಬೆಂಗಳೂರು: ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಸಂಬಂಧ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ನಗರ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಹೈಕೋರ್ಟ್ ನಿರ್ದೇಶಿಸಿದೆ.
ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಹಾಗೂ ಗಲಭೆಯಲ್ಲಿ ಆಗಿರುವ ನಷ್ಟ ಅಂದಾಜು ಮಾಡಿ ಹೊಣೆಗಾರಿಕೆ ನಿಗದಿಪಡಿಸಲು ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ, ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ ಕ್ಲೇಮ್ ಕಮಿಷನರ್ಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಗಲಭೆಯಲ್ಲಿ ನಷ್ಟ ಅನುಭವಿಸಿದವರು ಪರಿಹಾರ ಕೋರಿ ಈವರೆಗೆ 90 ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಹೇಳಿಕೆ ದಾಖಲಿಸಿಕೊಂಂಡ ಪೀಠ, ಗಲಭೆ ಸಂಬಂಧ ದಾಖಲಾಗಿರುವ ಪ್ರಕರಣಗಳಲ್ಲಿ ಈವರೆಗೆ ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಮುಂದಿನ ವಿಚಾರಣೆ ವೇಳೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಬಾಣಸವಾಡಿ ಎಸಿಪಿ ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜೂನ್ 22ಕ್ಕೆ ಮುಂದೂಡಿತು.