ಬೆಂಗಳೂರು: ರಾಜ್ಯದಲ್ಲಿ ಶಾಸಕರು ಮತ್ತು ಸಂಸದರ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಸರ್ಕಾರ 2020ರ ಸೆ.16 ನಂತರ ಹಿಂಪಡೆದುಕೊಂಡಿರುವ ಪ್ರಕರಣಗಳೆಷ್ಟು? ಹಾಗೂ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳೆಷ್ಟು ಎಂಬ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಮಾಹಿತಿ ಪಡೆದು ಸಲ್ಲಿಸುವಂತೆ ಹೈಕೋರ್ಟ್ ತನ್ನ ರಿಜಿಸ್ಟ್ರಾರ್ ಜನರಲ್‌ಗೆ ಸೂಚಿಸಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದ ಮಾಜಿ-ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅಮೈಕಸ್ ಕ್ಯೂರಿ ಆದಿತ್ಯ ಸೋಂಧಿ ವಾದ ಮಂಡಿಸಿ, ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿರುವ ಕುರಿತು ದಾಖಲೆ ಸಲ್ಲಿಸುವಂತೆ ಹೈಕೋರ್ಟ್ ಆ.26ರಂದು ಸರ್ಕಾರಕ್ಕೆ ನಿರ್ದೇಶಿಸಿದೆ. ಹಾಗೆಯೇ, 2020ರ ಸೆ.16ರ ನಂತರ ಶಾಸಕರು ಮತ್ತು ಸಂಸದರ ವಿರುದ್ಧ ಬಾಕಿಯಿರುವ ಪ್ರಕರಣಗಳ ಮಾಹಿತಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ತರಿಸಿಕೊಳ್ಳುವಂತೆ ರಿಜಿಸ್ಟ್ರಾರ್ ಜನರಲ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ ಎಂದು ವಿವರಿಸಿದರು.
ವಾದ ಪರಿಗಣಿಸಿದ ಪೀಠ, ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಪೈಕಿ 2020ರ ಸೆ.160ರ ನಂತರ ರಾಜ್ಯ ಸರ್ಕಾರ ಎಷ್ಟು ಪ್ರಕರಣಗಳನ್ನು ಹಿಂಪಡೆದುಕೊಂಡಿದೆ, ಬಾಕಿಯಿರುವ ಹಾಗೂ ಇತ್ಯರ್ಥಪಡಿಸಿರುವ ಪ್ರಕರಣಗಳ ಬಗ್ಗೆ ಜನ ಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯದಿಂದ ಮಾಹಿತಿ ಪಡೆದು ಸಲ್ಲಿಸುವಂತೆ ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶಿಸಿತು. ವಿಚಾರಣೆಯನ್ನು 2022ರ ಜ.17ಕ್ಕೆ ಮುಂದೂಡಲಾಗಿದೆ.