ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸುವ ಕುರಿತಂತೆ ವಸ್ತುಸ್ಥಿತಿ ವರದಿ ಸಲ್ಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಈ ಕುರಿತು ಸಂಜೀವ್ ನಾರಾಯಣ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರಿದ್ದ ವಿಭಾಗೀಯ ಪೀಠವು ರಾಜ್ಯ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಪೀಠವು ಸರ್ಕಾರಿ ಪರ ವಕೀಲರಿಗೆ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಪೂರೈಕೆ ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿತು. ಇದಕ್ಕೆ ಸರ್ಕಾರಿ ವಕೀಲರು ಉತ್ತರಿಸಿ, ಹಂತ-ಹಂತವಾಗಿ ಪಠ್ಯ ಪುಸ್ತಕಗಳನ್ನು ಪೂರೈಸಲಾಗುವುದು. ಸೆಪ್ಟಂಬರ್ ಕೊನೆ ವೇಳೆಗೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ತರಗತಿಗಳು ಆರಂಭವಾಗುವುದಕ್ಕಿಂತ ಮುಂಚೆ ಪಠ್ಯ ಪುಸ್ತಕಗಳ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು. ಈಗಾಗಲೇ ರಾಜ್ಯದಲ್ಲಿ 9 ರಿಂದ 12ನೇ ವರೆಗೆ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಪಠ್ಯ ಪುಸ್ತಕಗಳು ಇಲ್ಲದೇ ಮಕ್ಕಳು ತಗರತಿಗೆ ಬಂದರೆ ಅದು ನಿಷ್ಪ್ರಯೋಜಕವಾಗಲಿದೆ. ಮಕ್ಕಳ ಮತ್ತು ಸರ್ಕಾರದ ಉದ್ದೇಶ ಸಾಫಲ್ಯಗೊಳ್ಳುವುದಿಲ್ಲ. ಆದ್ದರಿಂದ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸುವ ವ್ಯವಸ್ಥೆಯ ಕುರಿತು ಆಗಸ್ಟ್ 30ರೊಳಗಿನ ವಸ್ತುಸ್ಥುತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅದೇ ರೀತಿ ಪಿಯು ಪಠ್ಯ ಪುಸ್ತಕಗಳು ಸಕಾಲದಲ್ಲಿ ಮತ್ತು ಸುಲಭವಾಗಿ ವಿದ್ಯಾರ್ಥಿಗಳಿಗೆ ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿತು.
ಆನ್‌ಲೈನ್ ಶಿಕ್ಷಣ ಪದ್ದತಿ ನಡೆಯುತ್ತಿರುವುದರಿಂದ ಸೌಲಭ್ಯವಿಲ್ಲದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಎಲೆಕ್ಟ್ರಾನಿಕ್ ಸಾಧನಗಳನ್ನು ಪೂರೈಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಆದರೆ, ಈಗಾಗಲೇ ಶಾಲೆಗಳು ಪ್ರಾರಂಭಿಸುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿರುವುದರಿಂದ ಈ ಹಂತದಲ್ಲಿ ಯಾವುದೇ ನಿರ್ದೇಶನ ನೀಡಲಾಗದು ಎಂದು ಪೀಠ ಸ್ಪಷ್ಟಪಡಿಸಿತು.