ಬೆಂಗಳೂರು: ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಕಂದಾಯ ಸಚಿವ ಆರ್.ಅಶೋಕ್ ಸಂಬಂಧಿ ಎ. ರವಿ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತು ಆರ್‌ಟಿಐ ಕಾರ್ಯಕರ್ತ ಟಿ. ನರಸಿಂಹಮೂರ್ತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಅರ್ಜಿಯಲ್ಲಿ ಯಾವುದೇ ಮೆರಿಟ್ ಇಲ್ಲದ ಕಾರಣ ವಜಾಗೊಳಿಸಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅರ್ಜಿದಾರರ ಆರೋಪವೇನಿತ್ತು?
ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಸಚಿವ ಆರ್. ಅಶೋಕ್ ಸಂಬಂಧಿಯಾದ ಎ. ರವಿ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ಅಧ್ಯಕ್ಷರಾಗಿರುವ ಎ. ರವಿ ಕೇವಲ ಪಿಯುವರೆಗೆ ಓದಿದ್ದು, ಪದವಿ ಕೂಡ ಪೂರೈಸಿಲ್ಲ. ಹಾಗಿದ್ದೂ, ಸಿಎಂ ಮತ್ತು ಅಶೋಕ್ ಅವರ ಪ್ರಭಾವ ಬಳಸಿ ಉನ್ನತ ಹುದ್ದೆ ಪಡೆದುಕೊಂಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು.
ಅಲ್ಲದೆ, ವಿಮಾನ ನಿಲ್ದಾಣದ ಸುತ್ತಲಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಬಹುದೊಡ್ಡ ವ್ಯಾಪ್ತಿಯ ಪ್ರದೇಶಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ, ಮಾನ್ಯ ಮಾಡುವ ಅಥವಾ ತಿರಸ್ಕರಿಸುವ ಜವಾಬ್ದಾರಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಹೊಂದಿದೆ. ಇಂತಹ ಪ್ರಾಧಿಕಾರಕ್ಕೆ ಕನಿಷ್ಠ ಶೈಕ್ಷಣಿಕ ಅರ್ಹತೆಯೂ ಇಲ್ಲದ ವ್ಯಕ್ತಿಯನ್ನು ರಾಜಕೀಯ ಕಾರಣಗಳಿಗಾಗಿ ನೇಮಕ ಮಾಡಲಾಗಿದೆ. ಹಾಗಾಗಿ, ರವಿ ಅವರ ನೇಮಕಾತಿ ಆದೇಶ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.