ಬೆಂಗಳೂರು: ರಾಜ್ಯದ 14 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲ ಹಾಗೂ 13 ಸಾವಿರಕ್ಕೂ ಅಧಿಕ ಅಂಗನವಾಡಿಗಳಲ್ಲಿ ಶೌಚಾಲಯಗಳು ಇಲ್ಲದಿರುವ ಕುರಿತು ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ಮುಂದಿನ ಒಂದು ವರ್ಷದೊಳಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಗಡುವು ವಿಧಿಸಿದೆ.
2021ರ ಡಿಸೆಂಬರ್ 31 ರೊಳಗೆ ಎಲ್ಲ ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಹಾಗೂ ಫ್ಯಾನ್ ಸೌಲಭ್ಯ ಒದಗಿಸಬೇಕು. ಅದೇ ರೀತಿ 2022ರ ಜೂನ್ 30 ರ ಒಳಗೆ ಪ್ರತಿಯೊಂದು ಅಂಗನವಾಡಿ ಕೇಂದ್ರಕ್ಕೂ ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿಕೊಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿದೆ.
ರಾಜ್ಯದಲ್ಲಿನ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠವು ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ. ಅಲ್ಲದೇ, ಅಂಗನವಾಡಿಗಳ ಮೂಲಸೌಕರ್ಯ ಅಭಿವೃದ್ಧಿ ಸಂಬಂಧ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ಅವರ ನೇತೃತ್ವದ ಸಮಿತಿ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಅನೇಕ ಸಲಹೆಗಳನ್ನು ನೀಡಿದೆ. ಅವುಗಳನ್ನು ಜಾರಿಗೊಳಿಸುವ ಬಗ್ಗೆ ಮುಂದಿನ ವಿಚಾರಣೆ ವೇಳೆ ಸರ್ಕಾರ ತನ್ನ ನಿಲುವು ತಿಳಿಸಬೇಕು. ಜೊತೆಗೆ, ಕೋವಿಡ್ ಸೋಂಕಿನ ಅಲೆ ತಗ್ಗಿರುವ ಹಿನ್ನೆಲೆಯಲ್ಲಿ ಮುಚ್ಚಿರುವ ಅಂಗನವಾಡಿ ಕೇಂದ್ರಗಳನ್ನು ಪುನಃ ಯಾವಾಗ ಪ್ರಾರಂಭಿಸಲಾಗುತ್ತದೆ ಎಂಬ ಕುರಿತೂ ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.
ರಾಜ್ಯದಲ್ಲಿ ಒಟ್ಟು 65,911 ಅಂಗನವಾಡಿ ಕೇಂದ್ರಗಳಿದ್ದು, ಅವುಗಳಲ್ಲಿ 14,948 ಕೇಂದ್ರಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲ. 13,690 ಕೇಂದ್ರಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಈ ವಿಚಾರವಾಗಿ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ಕನಿಷ್ಠ ಮೂಲ ಸೌಕರ್ಯವಿಲ್ಲದೇ ಅಂಗನವಾಡಿ ಕೇಂದ್ರಗಳನ್ನು ನಡೆಸುವುದಾದರೂ ಹೇಗೆ ಎಂದು ಪ್ರಶ್ನಿಸಿದೆ. ಅಲ್ಲದೇ, ಮುಂದಿನ ಜೂನ್ ಒಳಗೆ ಕಡ್ಡಾಯವಾಗಿ ಸೌಲಭ್ಯಗಳನ್ನು ಕಲ್ಪಿಸುವಂತೆ ತಾಕೀತು ಮಾಡಿದೆ.