ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸಲು ಈವರೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ವೈರಸ್ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತರಾದ ಮೊಹಮ್ಮದ್ ಆರೀಫ್ ಜಲೀಲ್ ಹಾಗೂ ಮಾರುತಿ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಈ ವೇಳೆ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆರ್.ಸುಬ್ರಹ್ಮಣ್ಯ ಪೀಠಕ್ಕೆ ಮಾಹಿತಿ ನೀಡಿ, ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪರಿಸ್ಥಿತಿ ಮೇಲೆ ಸಂಪೂರ್ಣ ನಿಗಾ ವಹಿಸಲಾಗಿದೆ ಎಂದು ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸರ್ಕಾರ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ, ಈ ಹಂತದಲ್ಲಿ ಸರ್ಕಾರಕ್ಕೆ ನಿರ್ದೇಶನ ನೀಡುವ ಅವಶ್ಯಕತೆ ಕಾಣುತ್ತಿಲ್ಲ ಎಂದು ಅಭಿಪ್ರಾಯಪಟ್ಟಿತು. ಹಾಗಿದ್ದೂ ವೈರಸ್ ತಡೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.