ಬೆಂಗಳೂರು: ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ಗೋ ಶಾಲೆಯಲ್ಲಿರುವ ಜಾನುವಾರುಗಳ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಎಲ್ಲ ತಾಲೂಕುಗಳಲ್ಲಿ ಗೋಶಾಲೆಗಳನ್ನು ನಿರ್ಮಿಸಲು ಸೂಚಿಸಿದೆ.
ಕಾನೂನು ಸೇವಾ ಸಮಿತಿ ಹಾಗೂ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ನಿವಾಸಿ ಎ.ಮಲ್ಲಿಕಾರ್ಜುನ ಸಲ್ಲಿಸಿದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ನಡೆಯಿತು.
ಅರ್ಜಿದಾರರಾದ ಪರ ವಾದಿಸಿದ ವಕೀಲರು ರಾಜ್ಯ ಸರ್ಕಾರ 5 ವರ್ಷಗಳಿಂದ ಬರಗಾಲ ಇರುವ ತಾಲೂಕಿನಲ್ಲಿ ಜಾನುವಾರುಗಳಿಗೆ ಮೇವು ಕಲ್ಪಿಸುವ ಸೂಕ್ತ ವ್ಯವಸ್ಥೆ ಮಾಡಿಲ್ಲ. ಹಾಗೆ ತಾಲೂಕಿನಲ್ಲಿ ಗೋ ಶಾಲೆ ಕೂಡ ಸ್ಥಾಪಿಸಿಲ್ಲ. ಅದಕ್ಕಾಗಿ ಮೂಕ ಜೀವಿಗಳ ರೋಧನೆ ತಡೆಯಲು ಸರಿಯಾದ ವ್ಯವಸ್ಥೆ ಕಲ್ಪಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಪ್ರಾಣಿ ಸಂರಕ್ಷಣಾ ಕಾಯ್ದೆ-1960 ಅನ್ನು ರಾಜ್ಯದಲ್ಲಿ ಜಾರಿಗೆ ತಂದು ಜಾನುವಾರುಗಳ ಸಂರಕ್ಷಣೆ ಮಾಡಬೇಕು. ಹಾಗೆ ರಾಜ್ಯದ ಎಲ್ಲ ತಾಲೂಕುಗಳಲ್ಲಿ ಗೋ ಶಾಲೆ ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿ ವಿಚಾರಣೆ ಮುಂದೂಡಿದೆ.