ಬೆಂಗಳೂರು: ತಮ್ಮ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಕೋರಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, ನಗರದ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಇದನ್ನು ಖಂಡಿಸಿ, ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಲು ಕೋರಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ನಗರದ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ಎಫ್‌ಐಆರ್ ರದ್ದು ಕೋರಿ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಪೀಠ, ದೂರು ದಾಖಲಿಸಿರುವ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
ಕಳೆದ ಲೋಕಸಭಾ ಚುನಾವಣೆ ವೇಳೆ, 2019ರ ಮಾ. 27 ಮತ್ತು 28ರಂದು ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರ ಮನೆಗಳ ಮೇಲೆ ಐಟಿ ದಾಳಿ ನಡೆದಿತ್ತು. ಕೇಂದ್ರ ಬಿಜೆಪಿ ಸರ್ಕಾರದ ಕುಮ್ಮಕ್ಕಿನಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದ ಉಭಯ ಪಕ್ಷಗಳ ನಾಯಕರು, ಮಾ. 28ರಂದು ಬೆಂಗಳೂರಿನ ಐಟಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಈ ವಿಚಾರವಾಗಿ 2019ರ ಮೇ 2ರಂದು ಮಲ್ಲಿಕಾರ್ಜುನ ಎಂಬುವರು ನಗರದ 82ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಖಾಸಗಿ ದೂರಿನ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ ಈ ಕುರಿತು ತನಿಖೆ ನಡೆಸುವಂತೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರಿಗೆ ಆದೇಶಿಸಿತ್ತು. ಅದರಂತೆ ನ.27ರಂದು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಬಳಿಕ ದೂರು ರದ್ದುಪಡಿಸುವಂತೆ ಹೆಚ್‌ಡಿ ಕುಮಾರಸ್ವಾಮಿ ಕೋರಿದ್ದರು.