ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದ ಹೆಸರಿನಲ್ಲಿ ನಕಲಿ ಪತ್ರ ಸಷ್ಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಾರದಾ ಡೈಮಂಡ್, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ಅರ್ಜಿಗೆ ಹೈಕೋರ್ಟ್ ಮುಂದಿನ ವಿಚಾರಣೆ ವೇಳೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಖುದ್ದು ಹಾಜರಿರಬೇಕೆಂದು ಸೂಚಿಸಿದೆ.
ಏನಿದು ಪ್ರಕರಣ...?
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಬಿಎಲ್‌ಡಿಇ ಸಂಸ್ಥೆಯ ಲೆಟರ್ ಹೆಡ್‌ನಲ್ಲಿ ಮಾಜಿ ಸಚಿವ ಎಂ. ಬಿ. ಪಾಟೀಲ್ ಅವರು ಬರೆದಿದ್ದಾರೆ ಎನ್ನಲಾದ ನಕಲಿ ಪತ್ರವನ್ನು ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಶಾರದಾ ವಿರುದ್ಧ ಪ್ರಕರಣ ದಾಖಲಾಗಿತ್ತು.
ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸಬೇಕೆಂದು ಕೋರಿ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಪಿ. ಎಸ್. ದಿನೇಶ್‌ಕುಮಾರ್ ಅವರಿದ್ದ ನ್ಯಾಯಪೀಠದಲ್ಲಿ ಗುರುವಾರ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲ ಅರುಣ್ ಶ್ಯಾಮ್, ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಕಲಂ 60 ಎ ಪ್ರಕಾರ, ಶಾರದಾ ಡೈಮಂಡ್ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಸುಪ್ರೀಂಕೋರ್ಟ್ ಈ ಕಲಂ ಅನ್ನು 2015ರಲ್ಲಿ ರದ್ದುಗೊಳಿಸಿದೆ. ಹೀಗಾಗಿ ಈ ಕಲಂ ಅಡಿ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು, ಮುಂದಿನ ವಿಚಾರಣೆ ವೇಳೆ ಸಂಬಂಧಪಟ್ಟ ತನಿಖಾ ವರದಿ ಹಾಗೂ ಪೊಲೀಸ್ ಅಧಿಕಾರಿಗಳು ಖುದ್ದು ನ್ಯಾಯಪೀಠದ ಎದುರು ಹಾಜರಿರಾಬೇಕೆಂದು ಸೂಚಿಸಿ ವಿಚಾರಣೆಯನ್ನು ಆಗಸ್ಟ್ 7ಕ್ಕೆ ಮುಂದೂಡಿದರು.