ಬೆಂಗಳೂರು: ರಾಜ್ಯದಲ್ಲಿನ ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಳಂಬ ಮಾಡುತ್ತಿರುವ ಸರ್ಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಕೂಡಲೇ ಅರ್ಜಿಗೆ ಆಕ್ಷೇಪಣೆ ಸಲ್ಲಿಸದಿದ್ದರೆ ಮುಂದಿನ ವಿಚಾರಣೆ ವೇಳೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯೇ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದೆ.
ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್. ಕಾಂತಾ ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಿಲ್ಲ ಎಂಬ ಅಂಶವನ್ನು ಪರಿಗಣಿಸಿದ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಹಲವು ಬಾರಿ ಕಾಲಾವಕಾಶ ನೀಡಲಾಗಿದೆ. ಹೀಗಾಗಿ ಮುಂದಿನ ವಿಚಾರಣೆ ವೇಳೆಗೆ ಆಕ್ಷೇಪಣೆ ಸಲ್ಲಿಸಬೇಕು. ಇಲ್ಲದಿದ್ದರೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ವಿಚಾರಣೆಗೆ ಹಾಜರಾಗಿ ಈ ಕುರಿತು ವಿವರಣೆ ನೀಡಬೇಕು ಎಂದು ಸೂಚಿಸಿ, ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿತು.
ರಾಜ್ಯದಲ್ಲಿ ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು 2012ರಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ, ಸರ್ಕಾರ ಈವರೆಗೆ ವರದಿ ಅನ್ವಯ ಕ್ರಮ ಜರುಗಿಸಿಲ್ಲ. ಉಭಯ ಸದನಗಳಲ್ಲಿ ವರದಿಯನ್ನು ಚರ್ಚಿಸಬೇಕಿದ್ದರೂ ಚರ್ಚಿಸಿಲ್ಲ. ಈ ಸಂಬಂಧ ಉಪ ಲೋಕಾಯುಕ್ತರು ತನಿಖೆ ನಡೆಸಿ ನೀಡಿರುವ ವರದಿಯನ್ನೂ ಪರಿಗಣಿಸಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.
ಇದನ್ನೂ ಓದಿ: ಅನುಶ್ರೀ ಡ್ರಗ್ಸ್ ಕನ್ಸೂಮರ್ ಅಲ್ಲ ಅಕೆಯೇ ಡಗ್ಸ್ ಸಪ್ಲೈಯರ್ : ಪ್ರಶಾಂತ್ ಸಂಬರಗಿ ಹೊಸ ಬಾಂಬ್