ಬೆಂಗಳೂರು: ರಾಮನಗರದ ಕನಕಪುರ ತಾಲೂಕಿನ ಮೇಡಮಾರನಹಳ್ಳಿ ಕೆರೆ ಜಾಗ ಒತ್ತುವರಿ ಮಾಡಿ ಅಕ್ರಮವಾಗಿ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಕನಕಪುರದ ಕಬ್ಬಾಳು ನಿವಾಸಿ ಅಭಿಷೇಕ್ ಗೌಡ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲ ಬಿ.ಮಧುಸೂದನ್ ಅಡಿಗ ವಾದ ಆಲಿಸಿದ ಪೀಠ, ಸಣ್ಣ ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ರಾಮನಗರ ಜಿಲ್ಲಾಧಿಕಾರಿ, ತಹಶೀಲ್ದಾರ್ಗೆ ನೋಟಿಸ್ ಜಾರಿ ಮಾಡಿತು.
ಅರ್ಜಿದಾರರು ಆರೋಪಿಸಿರುವಂತೆ ಕೆರೆ ಒತ್ತುವರಿ ಮಾಡಲಾಗಿದೆಯೇ ಎಂಬ ಕುರಿತು ಸ್ಥಳೀಯ ತಹಶೀಲ್ದಾರ್ ಪರಿಶೀಲಿಸಬೇಕು. ಕೆರೆ ವ್ಯಾಪ್ತಿಯನ್ನು ಸರ್ವೆ ಮಾಡಿ ಒತ್ತುವರಿಯಾಗಿದೆಯೇ ಹಾಗೂ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಿ ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿತು.
ಇದನ್ನೂ ಓದಿ: ವಿಧಾನಸಭೆ ಕಲಾಪ: ಅಗಲಿದ ಗಣ್ಯರಿಗೆ ಸಂತಾಪ ಸೂಚನೆ
ಅರ್ಜಿದಾರರ ಕೋರಿಕೆ
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮುಡೇನಹಳ್ಳಿ ಗ್ರಾಮದ ಮೇಡಮಾರನಹಳ್ಳಿ ಕೆರೆಗೆ ಸೇರಿದ ಸರ್ವೆ ನಂಬರ್-18 ಹಾಗೂ 121ರಲ್ಲಿ ಒತ್ತುವರಿ ಮಾಡಲಾಗಿದೆ. ಹಾಗೆಯೇ ಒತ್ತುವರಿ ಜಾಗದಲ್ಲಿ ಅನಧಿಕೃತವಾಗಿ ಮಸೀದಿ ನಿರ್ಮಿಸಲಾಗಿದೆ. ಈ ಭೂಮಿಯನ್ನು ಸರ್ಕಾರ ಕೆರೆ ಅಭಿವೃದ್ಧಿ ಮತ್ತು ಸಂರಕ್ಷಣೆಗಾಗಿ 1985ರಲ್ಲಿ ವಶಪಡಿಸಿಕೊಂಡಿತ್ತು. ಹೀಗಾಗಿ ಒತ್ತುವರಿಯಾಗಿರುವ ಕೆರೆ ಪ್ರದೇಶದಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡವನ್ನು ತೆರವು ಮಾಡುವಂತೆ ಹಾಗೂ ಕೆರೆ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.