ಬೆಂಗಳೂರು: ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಯೋಗಕ್ಕೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡದಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಬೆಂಗಳೂರಿನ ಎಸ್.ಮಾರುತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಾದ ಆಲಿಸಿದ ಪೀಠ, ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.
ಅಲ್ಲದೆ ಮುಂದಿನ ವಿಚಾರಣೆ ವೇಳೆಗೆ ಆಯೋಗಕ್ಕೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ವಿಳಂಬವಾಗಿರುವ ಸಂಬಂಧ ಮಾಹಿತಿ ನೀಡುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ವಕೀಲರು ವಾದಿಸಿ, 2018ರಿಂದಲೂ ಆಯೋಗಕ್ಕೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿಲ್ಲ.
ಇದರಿಂದಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಸಲ್ಲಿಸಿರುವ ದೂರುಗಳು ಮತ್ತು ಮೇಲ್ಮನವಿಗಳನ್ನು ಇತ್ಯರ್ಥಪಡಿಸಲಾಗುತ್ತಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಮನವಿ ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಪೀಠಕ್ಕೆ ವಿವರಿಸಿದರು.