ಬೆಂಗಳೂರು : ಬೆಳಗಾವಿಯಲ್ಲಿ ಜ.17ರಂದು ನಡೆದಿದ್ದ ಬಿಜೆಪಿ ಸಮಾವೇಶದಲ್ಲಿ ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ ಕುರಿತು ಸಲ್ಲಿಸಿರುವ ಅರ್ಜಿ ಸಂಬಂಧ ಅಲ್ಲಿನ ನಗರ ಪೊಲೀಸ್ ಆಯುಕ್ತರು ಸಲ್ಲಿಸಿರುವ ಪ್ರಮಾಣಪತ್ರಕ್ಕೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.
ನಿಯಮ ಉಲ್ಲಂಘಿಸಿದವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಅನುಸಾರ ಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥರಿಗೆ ಕೇವಲ ದಂಡ ವಿಧಿಸಲಾಗಿದೆ. ಪೊಲೀಸ್ ಆಯುಕ್ತರಿಗೆ ಕಾಯ್ದೆಯ ಬಗ್ಗೆ ಅರಿವಿದ್ದಂತೆ ಕಾಣುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಆಕ್ರೋಶ ವ್ಯಕ್ತಪಡಿಸಿದೆ.
ಆಯೋಜಕರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ. ಸಾಂಕ್ರಾಮಿಕ ರೋಗಗಳ ಕಾಯ್ದೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಪ್ರಮಾಣಪತ್ರವನ್ನು ಒಪ್ಪಲು ಸಾಧ್ಯವಿಲ್ಲ ಎಂದಿರುವ ಪೀಠ, ಹೊಸದಾಗಿ ಸಮರ್ಪಕ ಮಾಹಿತಿ ಒಳಗೊಂಡ ಪ್ರಮಾಣಪತ್ರವನ್ನು ಜೂ.3ರ ಒಳಗೆ ಸಲ್ಲಿಸುವಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿದೆ. ಇದೇ ವೇಳೆ, ಸಭೆ-ಸಮಾರಂಭಗಳಲ್ಲಿ ಭಾಗಿಯಾಗಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವ ಪ್ರತಿಯೊಬ್ಬರ ವಿರುದ್ಧವೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸುವಂತೆ ಈ ಹಿಂದೆ ನೀಡಿದ್ದ ಆದೇಶ ಪಾಲಿಸಿರುವ ಕುರಿತು ಅನುಪಾಲನಾ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದ ಪೀಠ, ವಿಚಾರಣೆಯನ್ನು ಜೂ.4ಕ್ಕೆ ಮುಂದೂಡಿದೆ.