ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 300ಕ್ಕೂ ಅಧಿಕ ಸರ್ಕಾರಿ ಅಭಿಯೋಜಕರ ಹುದ್ದೆಗಳನ್ನು ಮುಂದಿನ 3 ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ಕೊರತೆ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ, ಈ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ 'ಖಾಲಿ ಇರುವ ಎಪಿಪಿಗಳ ಹುದ್ದೆ ಭರ್ತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 4 ತಿಂಗಳು ಕಾಲಾವಕಾಶ ನೀಡಿದರೆ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು' ಎಂದು ಭರವಸೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸರ್ಕಾರಿ ಅಭಿಯೋಜಕರಿಲ್ಲದೆ ನ್ಯಾಯಾಲಯದ ಕಲಾಪಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಸರ್ಕಾರದ ಮಾಹಿತಿಯಂತೆಯೇ 300ಕ್ಕೂ ಅಧಿಕ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳು ಖಾಲಿ ಇವೆ. ಅಂದರೆ 300 ಕೋರ್ಟ್‌ಗಳಿಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ ಎಂದೇ ಅರ್ಥ. ಇದರಿಂದ ಕಕ್ಷಿದಾರರಿಗೂ, ವಿಚಾರಣಾಧೀನ ಕೈದಿಗಳಿಗೂ ತೊಂದರೆಯಾಗುತ್ತಿದೆ. ಹೀಗಾಗಿ, 3 ತಿಂಗಳ ಒಳಗೆ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು ನಿರ್ದೇಶಿಸಿತು. ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ಮುಂದೂಡಲಾಗಿದೆ.
ಇದನ್ನೂ ಓದಿ: ಸಾಮೂಹಿಕ ವರ್ಗಾವಣೆಗೆ ಮುಂದಾದ ಸಿಸಿಬಿ: ಒಂದೇ ದಿನ 26 ಸಿಬ್ಬಂದಿ ಟ್ರಾನ್ಸ್ಫರ್