ಬೆಂಗಳೂರು: ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ನಿವೃತ್ತ ಡಿಜಿಪಿ ಹೆಚ್.ಎನ್ ಸತ್ಯನಾರಾಯಣರಾವ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಾನನಷ್ಟ ಮೊಕದ್ದಮೆ ಸಂಬಂಧ ತಮ್ಮ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಡಿ. ರೂಪಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜ್ ಅವರ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.
ಅರ್ಜಿಯ ಮುಂದಿನ ವಿಚಾರಣೆವರೆಗೆ ಡಿ. ರೂಪಾ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ. ಜೊತೆಗೆ, ದೂರುದಾರ ಕಾರಾಗೃಹ ಇಲಾಖೆಯ ಡಿಜಿಪಿ ಆಗಿದ್ದ ಹೆಚ್.ಎನ್. ಸತ್ಯನಾರಾಯಣ ರಾವ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಮಧುಕರ್ ದೇಶಪಾಡೆ ವಾದ ಮಂಡಿಸಿ, ಅಪರಾಧ ದಂಡ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 199ರ ಪ್ರಕಾರ ಸರ್ಕಾರಿ ಸೇವಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಬೇಕಾದರೆ ವಿಶೇಷ ನಿಯಮ ಅನುಸರಿಸಬೇಕು. ಸರ್ಕಾರಿ ಅಭಿಯೋಜಕರ ಮೂಲಕವೇ ಸೆಷನ್ಸ್ ನ್ಯಾಯಾಲಯಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸಬೇಕು. ಮಾನಹಾನಿ ವರದಿ ಪ್ರಕಟಗೊಂಡ ಆರು ತಿಂಗಳ ಒಳಗೆ ಮೊಕದ್ದಮೆ ದಾಖಲಿಸಬೇಕು. ಸತ್ಯನಾರಾಯಣ ಅವರು ಸರ್ಕಾರಿ ಸೇವಕರಾಗಿರುವ ಡಿ. ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಾಗ ಈ ನಿಯಮ ಪಾಲಿಸಿಲ್ಲ ಎಂದು ವಿವರಿಸಿದರು.
ಅಲ್ಲದೇ, ಸರ್ಕಾರಿ ಸೇವಕರೊಬ್ಬರು ಮತ್ತೋರ್ವ ಸರ್ಕಾರಿ ಸೇವಕರ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸುವುದು ಮಾನನಷ್ಟ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ. ತಮ್ಮ ಅಧಿಕೃತ ಕರ್ತವ್ಯದ ನಿರ್ವಹಣೆ ಭಾಗವಾಗಿ ವರದಿ ಸಲ್ಲಿಸಿರುತ್ತಾರೆ. ಆದರೂ, ಸತ್ಯನಾರಾಯಣರಾವ್ ದಾಖಲಿಸಿದ ಮಾನನಷ್ಟ ಮೊಕದ್ದಮೆ ದೂರು ಪರಿಗಣಿಸಿ ಡಿ. ರೂಪಾ ವಿರುದ್ಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತನಿಖೆಗೆ ಆದೇಶಿಸಿರುವುದು, ಕಾಗ್ನಿಜೆನ್ಸ್ ತೆಗೆದುಕೊಂಡು ಸಮನ್ಸ್ ಜಾರಿ ಮಾಡಿರುವುದು ಕಾನೂನು ಬಾಹಿರ. ಹಾಗಾಗಿ, ಡಿ. ರೂಪಾ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸಬೇಕು. ಈ ಅರ್ಜಿ ಇತ್ಯರ್ಥವಾಗುವರೆಗೆ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದರು.
ಪ್ರಕರಣದ ಹಿನ್ನೆಲೆ:
2017ರ ಜುಲೈ 12ರಂದು ರಾಜ್ಯ ಕಾರಾಗೃಹಗಳ ಇಲಾಖೆ ಡಿಜಿಐ ಆಗಿದ್ದ ಡಿ. ರೂಪಾ ಸರ್ಕಾರಕ್ಕೆ ವರದಿ ಸಲ್ಲಿಸಿ, ಕಾರಾಗೃಹ ಇಲಾಖೆ ಡಿಜಿಪಿಯಾಗಿದ್ದ ಹೆಚ್.ಎನ್. ಸತ್ಯನಾರಾಯಣರಾವ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತರಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ವಿಶೇಷ ಸೌಲಭ್ಯ ಕಲ್ಪಿಸಲು ಸತ್ಯನಾರಾಯಣರಾವ್ ಎರಡು ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ವರದಿಯಲ್ಲಿ ಆರೋಪಿಸಲಾಗಿತ್ತು. ಈ ಕುರಿತಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು.
ಇದನ್ನೂ ಓದಿ: ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಶಂಕೆ: ರಾಯಚೂರಲ್ಲಿ ವ್ಯಕ್ತಿಯ ಬರ್ಬರ ಕೊಲೆ
2017ರ ಜುಲೈ 31ರಂದು ಸೇವೆಯಿಂದ ನಿವೃತ್ತರಾಗಿದ್ದ ಸತ್ಯನಾರಾಯಣ ರಾವ್ ಅವರು ಸಹೋದ್ಯೋಗಿ ಡಿ. ರೂಪಾ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ, ಇದರಿಂದ ತಮ್ಮ ಘನತೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ 2018ರ ಫೆಬ್ರವರಿ 5ರಂದು ನಗರದ 9ನೇ ಎಸಿಎಂಎಂ ನ್ಯಾಯಾಲಯಕ್ಕೆ 20 ಕೋಟಿ ರೂಪಾಯಿ ಮೊತ್ತಕ್ಕೆ ಖಾಸಗಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ದೂರುದಾರರ ಪ್ರಮಾಣಿಕೃತ ಹೇಳಿಕೆ ದಾಖಲಿಸಿಕೊಂಡಿದ್ದ ಎಸಿಎಂಎಂ ನ್ಯಾಯಾಲಯ 2021ರ ಆಗಸ್ಟ್ 6ರಂದು ಡಿ.ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.