ಬೆಂಗಳೂರು: 2019ರ ಫೆಬ್ರವರಿಯಲ್ಲಿ ಯಲಹಂಕ ವಾಯುನೆಲೆಯಲ್ಲಿ ಅಂತಾರಾಷ್ಟ್ರೀಯ ಏರ್ ಶೋ ವೇಳೆ ಸಂಭವಿಸಿದ್ದ ಅಗ್ನಿ ಅವಘಡ ಪ್ರಕರಣದ ತನಿಖಾ ಪ್ರಗತಿ ವರದಿಯನ್ನು ಮುಂದಿನ ಒಂದು ತಿಂಗಳ ಒಳಗೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಅಗ್ನಿ ಅವಘಡವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ವಿ.ಅತ್ರಿ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದಿಸಿ, 2021ರ ಫೆಬ್ರವರಿಯಲ್ಲಿ ಮತ್ತೆ ಏರ್ ಶೋ ನಡೆಯಲಿದೆ. ಹೀಗಾಗಿ ಈ ಹಿಂದೆ ನಡೆದಂತಹ ಅವಘಡಗಳು ಮರುಕಳಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದರು.
ಇದನ್ನೂ ಓದಿ: ನಗರದಲ್ಲಿ ಹೆಚ್ಚುತ್ತಿರುವ ಶಬ್ದ ಮಾಲಿನ್ಯ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ಏರ್ ಶೋ ಹಿನ್ನೆಲೆಯಲ್ಲಿ ಎಲ್ಲಾ ಸುರಕ್ಷಿತ ಕ್ರಮ ಕೈಗೊಳ್ಳಲಾಗುವುದು ಎಂದು ಪೀಠಕ್ಕೆ ಭರವಸೆ ನೀಡಿದರು. ಮಧ್ಯಪ್ರವೇಶಿಸಿದ ಪೀಠ, ಹಿಂದಿನ ವಿಚಾರಣೆ ವೇಳೆಯೇ ತನಿಖಾ ಪ್ರಗತಿ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಅರ್ಜಿ ವಿಚಾರಣೆಗೆ ಬಂದು ಒಂದು ವರ್ಷ ಕಳೆದಿದೆ. ಇನ್ನೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ ಮುಂದಿನ ಒಂದು ತಿಂಗಳಲ್ಲಿ ತನಿಖಾ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ ವಿಾಚರಣೆಯನ್ನು ಜನವರಿ 7ಕ್ಕೆ ಮುಂಂದೂಡಿತು.