ಬೆಂಗಳೂರು: ಅಗ್ರಿಗೋಲ್ಡ್ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ ರಾಮನಗರ ಉಪವಿಭಾಗಾಧಿಕಾರಿ (ಎಸಿ)ಯನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಮಂಗಳೂರಿನ ಅಗ್ರಿಗೋಲ್ಡ್ ಗ್ರಾಹಕರು ಮತ್ತು ಏಜೆಂಟರ ಕಲ್ಯಾಣ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಹಾಗೂ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯಪೀಠ ರಾಮನಗರ ಎಸಿ ಮಂಜುನಾಥ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.
ಅಗ್ರಿಗೋಲ್ಡ್ ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಅಧಿಕಾರಿ ಹೈಕೋರ್ಟ್ ಗೆ ತಪ್ಪು ಮಾಹಿತಿ ನೀಡಿದ್ದರು ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿತ್ತು. ಅದರಂತೆ, ಪ್ರಕರಣದ ವಿಚಾರಣೆಗೆ ಹಾಜರಾದ ಎಸಿ ಮಂಜುನಾಥ್ ನ್ಯಾಯಾಲಯಕ್ಕೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಇದೇ ವೇಳೆ ಸರ್ಕಾರದ ವಕೀಲರು, ಸಂವಹನ ಕೊರತೆಯಿಂದಾಗಿ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಲಾಗಿದೆ. ಅಧಿಕಾರಿಯನ್ನು ಕ್ಷಮಿಸಬೇಕು ಎಂದು ಕೋರಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ತಪ್ಪು ಮಾಹಿತಿ ನೀಡಿ ಕ್ಷಮೆ ಕೋರಿದರೆ ಎಲ್ಲವೂ ಮುಗಿದು ಹೋಗುವುದಿಲ್ಲ. ನ್ಯಾಯಾಲಯದ ಹಾದಿ ತಪ್ಪಿಸುವ ಕೆಲಸ ಮಾಡಿದ್ದೀರಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವುದಾಗಿ ಸುಳ್ಳು ಹೇಳಿದ್ದೀರಿ. ಒಂದಲ್ಲ, ನಾಲ್ಕು ಬಾರಿ ಇದನ್ನೇ ಹೇಳಿದ್ದೀರಿ. 14 ವರ್ಷದ ಸೇವಾವಧಿಯಲ್ಲಿ ಇದೇನಾ ನೀವು ಕಲಿತದ್ದು. ಹೈಕೋರ್ಟ್ ಎಂದರೆ ಅಷ್ಟು ಹಗುರವಾಗಿ ಪರಿಗಣಿಸಿದ್ದೀರಾ. ನಿಮ್ಮನ್ನ ಕೆಲಸದಿಂದ ವಜಾಗೊಳಿಸಿ, ಜೈಲಿಗೆ ಕಳುಹಿಸುತ್ತೇವೆ ಎಂದು ಅಧಿಕಾರಿಯ ಮೇಲೆ ನ್ಯಾಯಮೂರ್ತಿಗಳು ಕೆಂಡಾಮಂಡಲವಾಗಿದ್ದಾರೆ.
ಬಳಿಕ ಸರ್ಕಾರದ ಪರ ವಕೀಲರು ಮುಂದಿನ ದಿನಗಳಲ್ಲಿ ಇಂತಹ ತಪ್ಪುಗಳು ನಡೆಯದಂತೆ ನೋಡಿಕೊಳ್ಳುವುದಾಗಿ ಕೋರಿದ ಬಳಿಕ ಅಧಿಕಾರಿ ಮಂಜುನಾಥ್ ಅವರಿಗೆ ಎಚ್ಚರಿಕೆ ನೀಡಿ, ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ಜೂನ್ ತಿಂಗಳಿಗೆ ಮುಂದೂಡಿದೆ.
ಓದಿ : ಮಗ ಶಾಸಕನಾದ್ರೂ ಕೈಯಲ್ಲಿ ಪೊರಕೆ ಹಿಡಿದು ಶಾಲಾ ಕೆಲಸಕ್ಕೆ ತೆರಳಿದ ತಾಯಿ!