ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ ಚಾಲನೆ ಹಿನ್ನೆಲೆ ಭೂ ಸ್ವಾಧೀನ ಪ್ರಕ್ರಿಯೆಗಾಗಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು.
ಪ್ರಸಕ್ತ ಬಜೆಟ್ನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ 10,000 ಕೋಟಿ ರೂಪಾಯಿ ವಿಶೇಷ ಅನುದಾನವನ್ನ ಕೃಷ್ಣಾ ಮೇಲ್ದಂಡೆ ಯೋಜನೆ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ. ಇದರ ಸದ್ಬಳಕೆ ಮಾಡಿಕೊಂಡು ಆದಷ್ಟು ತ್ವರಿತವಾಗಿ ಕಾಮಗಾರಿ ಆರಂಭಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಅತ್ಯಂತ ಪ್ರಮುಖವಾಗಿ ಆಗಬೇಕಾಗಿರುವ ಕೆಲಸ ಭೂಸ್ವಾಧೀನ ಪ್ರಕ್ರಿಯೆ ಆಗಿದ್ದು, ಇದಕ್ಕೆ ವ್ಯವಸ್ಥಿತ ಕಾರ್ಯಯೋಜನೆ ರೂಪಿಸುವ ಸಂಬಂಧ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಉಪಸ್ಥಿತರಿದ್ದ ಗಣ್ಯರು ಸಾಕಷ್ಟು ಸಲಹೆಗಳನ್ನು ನೀಡಿದ್ದು,ಇದರ ಆಧಾರದ ಮೇಲೆ ಸಚಿವ ರಮೇಶ್ ಜಾರಕಿಹೊಳಿ ಮುಂದಿನ ಕಾರ್ಯ ಯೋಜನೆ ರೂಪಿಸಲಿದ್ದಾರೆ. ನೀರಾವರಿ ಕ್ಷೇತ್ರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದು,ಸಾವಿರಾರು ಜನರ ಜೀವನವನ್ನ ಹಸನಾಗಿಸುವ ಕಾರ್ಯಕ್ಕೆ ಒತ್ತು ಕೊಡಲಿದೆ.
ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಾನೂನು ಸಚಿವ ಮಾಧುಸ್ವಾಮಿ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.