ಬೆಂಗಳೂರು: ರಾಷ್ಟ್ರೀಯ ಪರಿಸರ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (ನೀರಿ) ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಲು ಬದ್ಧ ಎಂದು ಸರ್ಕಾರದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳನ್ನು ಮುಂದುವರಿಸಲು ಸಮ್ಮತಿಸಿದೆ.
ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕ ಅನಾಹುತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಲಿಮಿಟೆಡ್ ಪರ ಅಡ್ವೊಕೇಟ್ ಜನರಲ್ ವಾದಿಸಿ, ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುವ ಕಟ್ಟಡ ಹಾಗೂ ಇತರ ನಿರ್ಮಾಣ ಕಾಮಗಾರಿಗಳಲ್ಲಿ ನೀರಿ ಸಂಸ್ಥೆ ಸೂಚಿಸಿರುವ ಮಾರ್ಗಸೂಚಿ (ಎಸ್‌ಒಪಿ) ಪಾಲಿಸಲು ಬದ್ಧ ಎಂದು ಪೀಠಕ್ಕೆ ಭರವಸೆ ನೀಡಿದರು. ಹಾಗೆಯೇ, ಈ ಸಂಬಂಧ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ಮುಚ್ಚಳಿಕೆ ಸಲ್ಲಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳನ್ನು ಮುಂದುವರಿಸಲು ಅನುಮತಿ ನೀಡಿತು. ಜತೆಗೆ, ನೀರಿ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ಕಾಮಗಾರಿಗಳನ್ನು ಆರಂಭಿಸುವ ಕುರಿತು ನಿರ್ದೇಶಕ ಮಂಡಳಿಯ ಸಭೆಯಲ್ಲಿ ಕೈಗೊಂಡ ತೀರ್ಮಾನದ ವಿವರಗಳನ್ನು ಸಲ್ಲಿಸುವಂತೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಿತು.