ಬೆಂಗಳೂರು: ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಕಾಲೇಜಿನ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 8ಕ್ಕೆ ಮುಂದೂಡಿದೆ.
ವಿದ್ಯಾರ್ಥಿನಿ ರೇಷ್ಮಾ ಫಾರೂಕ್, ಇತರೆ ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ, ಪ್ರಕರಣದಲ್ಲಿ ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ವಿದ್ಯಾರ್ಥಿಗಳ ಪರ ವಕೀಲರು ವಾದಿಸಿ, ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು. ವಿದ್ಯಾರ್ಥಿನಿಯರನ್ನು ತರಗತಿಗೆ ಸೇರಿಸುತ್ತಿಲ್ಲ. ಇದರಿಂದ ಅವರ ಕಲಿಕೆಗೆ ಸಮಸ್ಯೆಯಾಗಿದೆ ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ಪೀಠ, ಅರ್ಜಿ ಸಂಬಂಧ ವಿವರಣೆ ನೀಡಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು.
ಅರ್ಜಿದಾರರ ಮನವಿ: ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸದಂತೆ ನಿರ್ಬಂಧಿಸಿದ್ದು, ಶಿರವಸ್ತ್ರ ಧರಿಸುವ ವಿದ್ಯಾರ್ಥಿನಿಯರನ್ನು ಕಾಲೇಜಿಗೆ ಸೇರಿಸುತ್ತಿಲ್ಲ. ಕಾಲೇಜಿನ ಈ ಕ್ರಮ ಸಂವಿಧಾನದ ವಿಧಿ 14 ಮತ್ತು 25ರಡಿ ಲಭ್ಯವಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಕಾನೂನು ಸುವ್ಯವಸ್ಥೆ, ಆರೋಗ್ಯ ಮತ್ತು ನೈತಿಕತೆಗೆ ಸಂಬಂಧಿಸಿದಂತೆ ಸಮಸ್ಯೆ ಇರದಿದ್ದ ಸಂದರ್ಭಗಳಲ್ಲಿ ಧಾರ್ಮಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ. ಹಾಗಿದ್ದೂ, ಕಾಲೇಜು ಆಡಳಿತ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಹೊರಗಿಡುವ ಮೂಲಕ ಪ್ರತ್ಯೇಕಿಸಿದೆ. ಇದು ವಿದ್ಯಾರ್ಥಿನಿಯರ ಮಾನಸಿಕ ಆರೋಗ್ಯ ಮತ್ತು ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ರಾಜಕೀಯ ಕಾರಣಗಳಿಗಾಗಿ ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡಲಾಗಿದೆ. ಅಷ್ಟೇ ಅಲ್ಲ, ಧರ್ಮದ ಕಾರಣಕ್ಕಾಗಿ ಅರ್ಜಿದಾರ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳನ್ನು ಕಾಲೇಜು ಮೊಕಟುಗೊಳಿಸಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣದ ಶ್ರೀಕಿ ಸೋದರನಿಗೆ ವಿದೇಶ ಪ್ರವಾಸಕ್ಕೆ ನಿರ್ಬಂಧ: ದಾಖಲೆ ಕೇಳಿದ ಹೈಕೋರ್ಟ್
ಸಂವಿಧಾನದ ವಿಧಿ 25 ಹಾಗೂ 26 ಧಾರ್ಮಿಕ ಆಚರಣೆಗಳ ಸ್ವಾತಂತ್ರ್ಯವನ್ನು ಕಾಯ್ದಿರಿಸಿದೆ. ಹಿಜಾಬ್ ಧರಿಸುವುದು ಇಸ್ಲಾಂನ ಅವಿಭಾಜ್ಯ ಆಚರಣೆ. ಕುರಾನ್ನಲ್ಲಿಯೂ ಕೂಡ ಮುಸ್ಲಿಂ ನಂಬಿಕೆಯನ್ನು ಪ್ರತಿಪಾದಿಸುವ ಮಹಿಳೆಯರಿಂದ ಹಿಜಾಬ್ ಧರಿಸುವ ಅಭ್ಯಾಸವನ್ನು ತೆಗೆದು ಹಾಕಿದರೆ ಧರ್ಮದ ಮೂಲ ಸ್ವರೂಪದಲ್ಲಿಯೂ ಬದಲಾವಣೆಯಾಗುತ್ತದೆ ಎಂದು ಹೇಳಲಾಗಿದೆ. ಆದ್ದರಿಂದ, ಹಿಜಾಬ್ ಧರಿಸುವ ವಿಚಾರದಲ್ಲಿ ಕಾಲೇಜು ಆಡಳಿತ ಮಧ್ಯಪ್ರವೇಶಿಸದಂತೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಅರ್ಜಿಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಶಿಕ್ಷಣ ಇಲಾಖೆ ಕಾರ್ಯದರ್ಶಿ, ಪದವಿಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರು, ಉಡುಪಿ ಜಿಲ್ಲಾಧಿಕಾರಿ, ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರು, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಯಶ್‌ಪಾಲ್ ಸುವರ್ಣ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಸೇರಿಸಲಾಗಿದೆ.