ಬೆಂಗಳೂರು: ಡ್ರಗ್ಸ್ ಹಾಗು ಬಿಟ್ ಕಾಯಿನ್ ಪ್ರಕರಣ ಗಂಭೀರವಾಗಿದ್ದು, ಈ ಪ್ರಕರಣದ ಬಗ್ಗೆ ಸಿಐಡಿ ತನಿಖಾ ತಂಡ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಇಂದು ಅಧಿಕಾರಿಗಳ ಜತೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ತನಿಖೆ ನಡೆಯುತ್ತಿರುವುದರಿಂದ ನಾನು ಏನನ್ನೂ ಹೇಳುವುದಿಲ್ಲ. ಆದರೆ ಸಿಐಡಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ತಿಳಿಸಿದರು.
ಯಾರನ್ನೂ ರಕ್ಷಿಸುವ ಕೆಲಸ ಮಾಡುತ್ತಿಲ್ಲ. ಪ್ರಕರಣದ ಬಗ್ಗೆ ಊಹಾಪೋಹ ಹೇಳಿಕೆಗಳನ್ನು ನೀಡಬಾರದು. ಡ್ರಗ್ಸ್ ಖರೀದಿ ಮತ್ತು ಬಿಟ್ ಕಾಯಿನ್ ಬಳಕೆ ಆಗಿದ್ದರೂ, ಪೊಲೀಸರು ಆರೋಪಿಗಳನ್ನು ಬಂಧಿಸಲಿದ್ದಾರೆ. ಪೊಲೀಸರು ಭಾಗಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಿದ್ದರಾಮಯ್ಯ ವಿರುದ್ಧ ಕಿಡಿ:
ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳ ಭಾಗಿ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆ ಕೊಡಬಾರದು. ಅವರು ಮುಖ್ಯಮಂತ್ರಿಯಾಗಿದ್ದವರು. ಈ ರೀತಿ ಹೇಳಿಕೆ ನೀಡುವ ಬದಲಾಗಿ ಪೊಲೀಸರಿಗೆ ನೇರವಾಗಿ ಫೋನ್ ಮಾಡಿ ತಿಳಿಸಬಹುದಿತ್ತು. ಇದು ದೇಶದ ಆರ್ಥಿಕತೆಯ ವಿಚಾರ. ಪಕ್ಷ ಮೀರಿ ಯೋಚಿಸಬೇಕು ಎಂದು ಸಲಹೆ ನೀಡಿದರು.
'ಕಾನೂನಿನ ಚೌಕಟ್ಟಿನಲ್ಲಿ ಕ್ರಮ':
ಈ ಪ್ರಕರಣದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನ ರಾಜಕಾರಣಿ ಯಾರೇ ಆಗಿರಬಹುದು, ಬೇರೆಯವರೂ ಇರಬಹುದು. ಶಾಸಕರಿದ್ದಾರೆ, ಇನ್ನೊಬ್ಬರಿದ್ದಾರೆ ಎಂದು ನಾನು ಹೇಳಲ್ಲ. ಅವರನ್ನು ಕಾನೂನಿನ ಚೌಕಟ್ಟಿನಲ್ಲಿ ತಂದು ಕ್ರಮ ಕೈಗೊಳ್ಳಲಾಗುವುದು ಹಾಗು ಶಿಕ್ಷೆಯೂ ಆಗಲಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
ಮಹಾಲಕ್ಷ್ಮಿ ಲೇಔಟ್ನಲ್ಲಿ ನಿರ್ಮಾಪಕ ಸೌಂದರ್ಯ ಜಗದೀಶ್, ಅವರ ಕುಟುಂಬ ಸದಸ್ಯರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಮಾಹಿತಿ ಇಲ್ಲ. ಮಾಹಿತಿ ತರಿಸಿಕೊಂಡು ತಿಳಿಸುತ್ತೇನೆ ಎಂದರು.
ಮಂಡ್ಯ ಎಸ್ಪಿ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಯಾವ ಒತ್ತಡವೂ ಇಲ್ಲ. ಅನೇಕ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕರ್ತವ್ಯಕ್ಕೆ ಹಾಜರಾಗಲು ಸಮಯ ಇದೆ. ಯಾವ ತಡೆಯಾಜ್ಞೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟದ ಬಗ್ಗೆ ಮಾತನಾಡಿ, ಬೆಳಗಾವಿಯಲ್ಲಿ ಕನ್ನಡದಲ್ಲಿ ವ್ಯವಹಾರ ನಡೆಯಲಿದೆ. ಈ ರೀತಿ ಎಂಇಎಸ್ ನಿಂದ ಪುಂಡಾಟಿಕೆ ನಡೆದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದಾಗಿ ಗೃಹ ಸಚಿವರು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳಿದ್ದಾರೆ, ಸೂಕ್ತ ತನಿಖೆಯಾಗಲಿ: ಸಿದ್ದರಾಮಯ್ಯ ಆಗ್ರಹ