ಬೆಂಗಳೂರು: ವಿಧಾನ ಪರಿಷತ್ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪರ್ಯಾಯ ದಾಖಲೆ ಸಲ್ಲಿಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಭಾರತ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(EPIC) ಹಾಜರುಪಡಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯ ದಾಖಲೆಗಳನ್ನು ಸಲ್ಲಿಸಿ ಮತ ಚಲಾಯಿಸಬಹುದಾಗಿದೆ.

ಈ ಸಂಬಂಧ ಚುನಾವಣಾಧಿಕಾರಿ ಪತ್ರಿಕಾ ಹೇಳಿಕೆ ಹೊರಡಿಸಿದ್ದು, ಮತ ಚಲಾಯಿಸಲು ಪರ್ಯಾಯ ದಾಖಲಾತಿಯಾದ ಆಧಾರ್ ಕಾರ್ಡ್, ವಾಹನ ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಪಾಸ್‍ಪೋರ್ಟ್, ಕೇಂದ್ರ, ರಾಜ್ಯ, ಸರ್ಕಾರಿ ನೌಕರರಾಗಿದ್ದಲ್ಲಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಲ್ಲಿ ಗುರುತಿನ ಚೀಟಿ, ಸಂಸದರು, ಶಾಸಕರು ನೀಡಿದ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳು ನೀಡಿದ ಸೇವಾ ಗುರುತಿನ ಚೀಟಿ, ಪದವಿ ಪ್ರಮಾಣ ಪತ್ರ, ಅಂಗವಿಕಲರ ಪ್ರಮಾಣ ಪತ್ರವನ್ನು ಹಾಜರು ಪಡಿಸಿ ಮತ ಚಲಾಯಿಸಬಹುದಾಗಿದೆ ಎಂದು ತಿಳಿಸಿದ್ದಾರೆ.