ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಐಎಂಎ ಸಂಸ್ಥೆಯ ಮಾಲೀಕ ಹಾಗೂ ಪ್ರಮುಖ ಆರೋಪಿ ಮನ್ಸೂರ್ ಖಾನ್ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ಮನ್ಸೂರ್ ಖಾನ್ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲು ತಮ್ಮ ವಶಕ್ಕೆ ನೀಡುವಂತೆ ಕೋರಿ ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ ಸಿಬಿಐ ವಿಶೇಷ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಆರೋಪಿಯನ್ನು ಒಟ್ಟು 5 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಲಾಗಿದೆ.
ಐಎಂಎ ಸಂಸ್ಥೆಯ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಕುರಿತು ಹೆಚ್ಚಿನ ತನಿಖೆ ನಡೆಸಲು ಸಿಬಿಐ ಅಧಿಕಾರಿಗಳು ಭಾನುವಾರ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಿದ್ದರು. ಹಾಗೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆರೋಪಿಗಳನ್ನು ಒಟ್ಟಿಗೆ ವಿಚಾರಣೆ ನಡೆಸುವ ಉದ್ದೇಶದಿಂದಾಗಿ ಸಿಬಿಐ ಅಧಿಕಾರಿಗಳು ಮನ್ಸೂರ್ ಖಾನ್ನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.