ಬೆಂಗಳೂರು: ಐಎಂಎ ಕಂಪನಿಯ ಠೇವಣಿದಾರರಿಗೆ ಹಣ ಬಿಡುಗಡೆಗಾಗಿ ಅವರ ಆಧಾರ್ ದೃಢೀಕರಣಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ರಾಜ್ಯ ಸರ್ಕಾರ, ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರಿ ವಕೀಲರು, ಐಎಂಎ ಪ್ರಕರಣದಲ್ಲಿ ಕೆಪಿಐಡಿ ಕಾಯ್ದೆಯಡಿ ನೇಮಕಗೊಂಡಿರುವ ಸಕ್ಷಮ ಪ್ರಾಧಿಕಾರ ಹಾಗೂ ವಿಶೇಷಾಧಿಕಾರಿಗೆ ಠೇವಣಿದಾರರ ಆಧಾರ್ ದೃಢೀಕರಣಕ್ಕೆ ನ.6ರಂದು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಠೇವಣಿದಾರರ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
ನವೆಂಬರ್ 25 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿರುವ ಬಗ್ಗೆ ಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರ ನೀಡಬೇಕು.
ಪ್ರಕರಣದ ತನಿಖೆಯಲ್ಲಿ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿತು. ಅಲ್ಲದೇ, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಇಡಿ ಡಿಸೆಂಬರ್ 7 ರೊಳಗೆ ತನಿಖಾ ಪ್ರಗತಿ ವರದಿ ಸಲ್ಲಿಸಬೇಕೆಂದು ನಿರ್ದೇಶಿಸಿ ವಿಚಾರಣೆಯನ್ನು ಡಿಸೆಂಬರ್ 9 ಕ್ಕೆ ಮುಂದೂಡಿತು.