ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವುದು ಸರ್ಕಾರದ ಮೊದಲ ಕರ್ತವ್ಯವಾಗಿದ್ದು, ಯಾವುದೇ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಕೋರಿದರೆ ಲೋಕೋಪಯೋಗಿ ಇಲಾಖೆಯು ಕೂಡಲೇ ಅನುಷ್ಠಾನ ಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿಂದು ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಆಯವ್ಯಯದಲ್ಲಿ ಅನುಮೋದಿತ ಯೋಜನೆಗಳ ಅನುಷ್ಠಾನಕ್ಕಾಗಿ ಕಾರ್ಯೋನ್ಮುಖರಾಗಬೇಕು. ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಡಾ. ಕೆ.ಎಸ್.ಕೃಷ್ಣ ರೆಡ್ಡಿ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.