ದೇವನಹಳ್ಳಿ: ರಾಜಧಾನಿಗೆ ಅಂತಾರಾಜ್ಯ ಜನರು ಪ್ರವೇಶ ಮಾಡುತ್ತಿದ್ದು, ಕೊರೊನಾ ಭೀತಿ ಹೆಚ್ಚಾಗುತ್ತಿದೆ. ಇದರಿಂದ ನಗರ ಪ್ರವೇಶಿಸುವ ಮುನ್ನ ರಾಷ್ಟ್ರೀಯ ಹೆದ್ದಾರಿ 7ರ ಸಾದಹಳ್ಳಿ ಟೋಲ್ ಗೇಟ್ ಬಳಿಯ ಚೆಕ್ ಪೋಸ್ಟ್ನಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ. ಆಧಾರ್ ಕಾರ್ಡ್ ಮತ್ತು ಸೂಕ್ತ ಕಾರಣವಿದ್ದರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.
ಸಾದಹಳ್ಳಿಯ ಟೋಲ್ ಮೂಲಕ ಆಂಧ್ರಪ್ರದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಬೆಂಗಳೂರಿಗೆ ಪ್ರವೇಶಿಸುತ್ತಿದ್ದಾರೆ. ಅಲ್ಲದೆ ಸ್ಥಳೀಯರು ತಮ್ಮ ವಾಹನಗಳಲ್ಲಿ ಆಂಧ್ರದಿಂದ ಜನರನ್ನು ಕರೆದುಕೊಂಡು ಬರುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬಂದ ಹಿನ್ನೆಲೆ ಯಲಹಂಕ ತಹಶೀಲ್ದಾರ್ ರಘುಮೂರ್ತಿ ಚೆಕ್ ಪೋಸ್ಟ್ನಲ್ಲಿ ತಪಾಸಣೆ ಮಾಡುವಂತೆ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
ಇದರಿಂದ ಚೆಕ್ ಪೋಸ್ಟ್ನಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಸ್ಥಳದಲ್ಲಿ ಕಂದಾಯ ಇಲಾಖೆ, ಪೊಲೀಸ್, ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೊರರಾಜ್ಯದಿಂದ ಬಂದವರನ್ನು ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಸೂಕ್ತ ಉತ್ತರ, ದಾಖಲೆ ನೀಡದವರನ್ನ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿದೆ.
ಹಣವಂತವರಿಗೆ ಅವರದ್ದೇ ಖರ್ಚಿನಲ್ಲಿ 5 ಸ್ಟಾರ್, 3ಸ್ಟಾರ್ ಹೋಟೆಲ್ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಬಡವರು, ನಿರ್ಗತಿಕರಿಗಾಗಿ ಹಾಸ್ಟೆಲ್, ಛತ್ರದಲ್ಲಿ ಉಚಿತವಾಗಿ ಕ್ವಾರಂಟೈನ್ ಮಾಡಲಾಗುತ್ತಿದೆ. ಚೆಕ್ ಪೋಸ್ಟ್ನಲ್ಲಿ ವಿಎ, ಆರ್ಐ, ಪಿಡಿಓ, ಅಸಿಸ್ಟೆಂಟ್ ಪ್ರೊಫೆಸರ್ ಸೇರಿ ಮೂರು ಪಾಳೆಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ.