ಬೆಂಗಳೂರು: ನವದೆಹಲಿ ಮತ್ತು ಕರ್ನಾಟಕದಲ್ಲಿ ತಮಗೆ ಸೇರಿದ ಫ್ಲ್ಯಾಟ್, ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಿಂದ ತಮ್ಮ ಹೆಸರನ್ನು ಕೈಬಿಡುವಂತೆ ಕೋರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಕರಣದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು. ಅಲ್ಲದೆ, ತನಿಖೆ ಮುಂದುವರಿಸುವಂತೆ ಹೇಳಿತ್ತು. ಈ ಆದೇಶ ಪ್ರಶ್ನಿಸಿ ಡಿಕೆಶಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ತೀರ್ಪು ಪ್ರಕಟಿಸಿರುವ ಹೈಕೋರ್ಟ್, ವಿಚಾರಣೆಗೆ ತಜೆಯಾಜ್ಞೆ ನೀಡಿದೆ. ಇದರಿಂದ ಡಿ.ಕೆ.ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.
ಡಿಕೆಶಿ ಹೆಸರನ್ನು ಕೈಬಿಡುವಂತೆ ಕೋರಿ ಅವರ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿತ್ತು. ಈ ಆದೇಶ ಕಾನೂನು ಬಾಹಿರ. ಹೀಗಾಗಿ ಈ ಅರ್ಜಿಯನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಲಾಗಿತ್ತು. ಬಳಿಕ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ್ ಅವರು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿ, ಅರ್ಜಿ ವಜಾಗೊಳಿಸಿದ್ದರು. ಅಲ್ಲದೆ, ದಾಖಲಾಗಿರುವ ದೂರಿನ ವಿಚಾರಣೆ ಅಥವಾ ತನಿಖೆಯನ್ನು ಮುಂದುವರಿಸುವಂತೆ ಆದೇಶಿಸಿದ್ದರು. ಇದೀಗ ಕೆಳ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.