ಬೆಂಗಳೂರು: ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯರ ಪ್ರತಿಭಟನೆ ಎರಡನೇ ದಿನವೂ ಮುಂದುವರೆದಿದ್ದು, ನಮ್ಮ ಮೇಲೆ ಹಲ್ಲೆ, ದೌರ್ಜನ್ಯ ನಿರಂತರವಾಗಿ ನಡೆಯುತ್ತಲೇ ಇವೆ. ನಮಗೆ ರಕ್ಷಣೆ ನೀಡಿ ಎಂದು ಕಿರಿಯ ವೈದ್ಯರು ಸರ್ಕಾರಕ್ಕೆ ಮನವಿ ಮಾಡಿದರು.
ಬೆಂಗಳೂರು ಮೆಡಿಕಲ್ ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ. ಸತೀಶ್ ಮಾತನಾಡಿ, ಶನಿವಾರ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಸಚಿವರು ರಕ್ಷಣೆ ಒದಗಿಸುವ ಭರವಸೆ ನೀಡಿದ್ದಾರೆ. ಸಚಿವರು ನೀಡಿರುವ ಭರವಸೆಯನ್ನು ಪ್ರತಿಭಟನಾನಿರತರಿಗೆ ಮುಟ್ಟಿಸಿದ್ದೇನೆ ಎಂದು ಹೇಳಿದರು.
ಆಸ್ಪತ್ರೆಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲು ತೀರ್ಮಾನಿಸಲಾಗಿದೆ. ಎಲ್ಲದಕ್ಕೂ ಸ್ವಲ್ಪ ಕಾಲಾವಕಾಶ ಬೇಕು. ರೋಗಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ವಹಿಸಲಾಗಿದೆ. ನಮ್ಮಲ್ಲಿರುವ ಸಿಬ್ಬಂದಿಯಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ. ಒಂದು ವೇಳೆ ಚಿಕಿತ್ಸೆಯಲ್ಲಿ ವ್ಯತ್ಯಯ ಉಂಟಾದರೆ ಗಮನಕ್ಕೆ ತನ್ನಿ. ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿದರು.
ಭಾನುವಾರ ಆದ ಕಾರಣ ರೋಗಿಗಳ ಸಂಖ್ಯೆ ವಿರಳವಾಗಿತ್ತು. ಆದರೆ, ವೈದ್ಯರ ಪ್ರತಿಭಟನೆ ಪರಿಣಾಮದಿಂದ ವಿಕ್ಟೋರಿಯಾ ಆಸ್ಪತ್ರೆ ಒಪಿಡಿ ಸೇವೆ ಇಂದು ಕೂಡ ಬಂದ್ ಆಗಿತ್ತು. ಪಟ್ಟು ಬಿಡದ ವೈದ್ಯರು ನಾಳೆಯೂ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದಾರೆ.