ಬೆಂಗಳೂರು: ಕನಕಪುರ ವಿಧಾನಸಭೆ ಕ್ಷೇತ್ರದ ನಲ್ಲಹಳ್ಳಿ ಹಾಗೂ ಉಯ್ಯಂಬಳ್ಳಿ ಪಂಚಾಯಿತಿಯ ನೂತನ ಸದಸ್ಯರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದರು.
ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳಿಗೆ ನಾಲ್ಕು ತಿಂಗಳ ಹಿಂದೆ ನಡೆದ ಚುನಾವಣೆಯಲ್ಲಿ ವಿವಿಧ ರಾಜಕೀಯ ಪಕ್ಷದ ಬೆಂಬಲಿತ ಅಭ್ಯರ್ಥಿಗಳು, ಆಯಾ ಪಕ್ಷಗಳ ಚಿನ್ಹೆ ರಹಿತವಾಗಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಲ್ಲಿ ಪ್ರಾಬಲ್ಯ ವ್ಯಕ್ತಪಡಿಸುವ ವಿಚಾರದಲ್ಲಿ ಪೈಪೋಟಿ ನಡೆದಿದೆ. ಎರಡು ಪಕ್ಷಗಳು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ತಮ್ಮ ಸದಸ್ಯರುಗಳ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ ಎಂದು ಹೇಳಿಕೊಳ್ಳುತ್ತಿದೆ.
ಇದೀಗ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ತಾವು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಯಾವ್ಯಾವ ಗ್ರಾಮ ಪಂಚಾಯಿತಿಗಳಲ್ಲಿ ಗೆದ್ದಿದ್ದೇವೆ ಎಂಬ ಕುರಿತು ಪಟ್ಟಿ ಸಿದ್ಧಪಡಿಸುತ್ತಿರುವುದಾಗಿ ತಿಳಿಸಿದ್ದರು. ಶೇಕಡ 60ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳನ್ನು ತೆಗೆದುಕೊಂಡಿರುವುದಾಗಿ ಹೇಳಿದ್ದರು.
ಇದೀಗ ವಿವಿಧ ಗ್ರಾಮ ಪಂಚಾಯಿತಿ ಸದಸ್ಯರು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿ ಮಾತನಾಡಿ ಅಭಿನಂದನೆ ಸಲ್ಲಿಸಿ ತೆರಳುತ್ತಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದ ಮೂಲಕವೇ ನಿರಂತರವಾಗಿ ಆಯ್ಕೆಯಾಗುತ್ತಾ ಬರುತ್ತಿರುವ ಡಿಕೆ ಶಿವಕುಮಾರ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಇಂದು ಗೆದ್ದ ಒಂದಿಷ್ಟು ಸದಸ್ಯರು ಡಿಕೆಶಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಕೆಲ ಹೊತ್ತು ಸಮಾಲೋಚಿಸಿ ತೆರಳಿದ್ದಾರೆ.