ಬೆಂಗಳೂರು : ಕನ್ನಡಿಗರ ತೀವ್ರ ಆಕ್ರೋಶದ ಹಿನ್ನೆಲೆ ಕನ್ನಡ ಮತ್ತು ಸಂಸ್ಜೃತಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಹಾಕಲಾಗಿದ್ದ ಹಿಂದಿ ಬ್ಯಾನರನ್ನು ತೆಗೆದು ಹಾಕಿದೆ. ಕನ್ನಡ ಮತ್ತು ಸಂಸ್ಕೃತಿ ವೆಬ್‌ಸೈಟ್‌ನಲ್ಲಿ ‘ಪ್ರತಿ ಮನೆಯಲ್ಲಿ ತ್ರಿವರ್ಣ’(ಹರ್ ಘರ್ ತಿರಂಗಾ) ಅಭಿಯಾನದ ಹಿಂದಿ ಭಾಷೆಯ ಪ್ರಚಾರದ ಬ್ಯಾನರ್ ಅಳವಡಿಸಲಾಗಿತ್ತು. ಇದರ ವಿರುದ್ಧ ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆ ವ್ಯಕ್ತಪಡಿಸಿದ್ದರು.
ಈ ಸಂಬಂಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ 'ಸಂಕಲ್ಪ್ ಸೆ ಸಿದ್ಧಿ' ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು. ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ ಎಂದು ಟೀಕಿಸಿದ್ದರು.
ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ. ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸುವವರು ಯಾರು ಎಂದು ಪ್ರಶ್ನಿಸಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಇಲಾಖೆ ವೆಬ್‌ಸೈಟ್‌ನಲ್ಲಿ ಹಾಕಲಾಗಿದ್ದ ಹಿಂದಿ ಬ್ಯಾನರ್ ಅನ್ನು ತೆಗೆದುಹಾಕಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್‌ನ ಹಿಂದಿ ಮುಖಪುಟವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸರ್ಕಾರ ತೀವ್ರ ಮುಜುಗರಕ್ಕೊಳಬೇಕಾಯಿತು. ಇದೀಗ ಹಿಂದಿ ಬ್ಯಾನರ್ ಅನ್ನು ತೆಗೆದುಹಾಕಲಾಗಿದೆ.
ಇದನ್ನೂ ಓದಿ : ರಾಜ್ಯದಲ್ಲಿರುವುದು ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ?: ಸಿದ್ದರಾಮಯ್ಯ