ಬೆಂಗಳೂರು: ರಾಜ್ಯದಲ್ಲಿ ಪದವಿ ತರಗತಿಗಳಿಗೆ ಕನ್ನಡ ಭಾಷೆ (Kannada compulsory) ಕಲಿಕೆಯನ್ನು ಕಡ್ಡಾಯ ಮಾಡಿರುವ ಸರ್ಕಾರದ ಕ್ರಮಕ್ಕೆ ಮತ್ತೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ (Karnataka High court), ಶಿಕ್ಷಣದಲ್ಲಿ ರಾಜಕೀಯ ಬೆರೆಸುವುದೇಕೆ ಎಂದು ಪ್ರಶ್ನಿಸಿದೆ.
ಪದವಿ ಕೋರ್ಸ್ಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ಸರ್ಕಾರದ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಹಿಂದಿನ ವಿಚಾರಣೆ ವೇಳೆ ಸರ್ಕಾರ ತನ್ನ ಆದೇಶವನ್ನು ಮರುಪರಿಶೀಲಿಸುವಂತೆ ಸೂಚಿಸಿತ್ತು. ಆದರೆ, ಇಂದು ವಿಚಾರಣೆ ಆರಂಭವಾದ ವೇಳೆ ಸರ್ಕಾರದ ಪರ ವಕೀಲರು ಕನ್ನಡವನ್ನು ಭಾಷೆಯಾಗಿ ಕಲಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಹಾಗೆಯೇ, ಭಾಷೆಯನ್ನು ಕಲಿಯುವುದನ್ನ ಪ್ರೋತ್ಸಾಹಿಸಲು ಅವಕಾಶವಿದೆ ಎಂದರು.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತೀರಿ. ಇದರಿಂದಾಗಿ ಎಷ್ಟೊಂದು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಹೊರಹೋಗಿದ್ದಾರೆ ಎಂಬುದು ಗೊತ್ತೇ ಎಂದು ಪ್ರಶ್ನಿಸಿತು. ಅಲ್ಲದೇ, ಕನ್ನಡ ಭಾಷೆ ಕಲಿಕೆಯನ್ನು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಡ್ಡಾಯ ಮಾಡಿಲ್ಲ. ಹಾಗಿದ್ದೂ ಹೊರ ರಾಜ್ಯದವರಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸುವುದು ಸರಿಯೇ. ಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯ ಮಾಡಲು ಅವಕಾಶ ಎಲ್ಲಿದೆ ಎಂದು ಪ್ರಶ್ನಿಸಿತು.
ಈ ಕುರಿತು ವಾದ ಮಂಡಿಸಲು ಸರ್ಕಾರದ ಪರ ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಪೀಠ ನವೆಂಬರ್ 15ಕ್ಕೆ ಮುಂದೂಡಿತು.
ಅರ್ಜಿದಾರರ ಕೋರಿಕೆ:
ರಾಜ್ಯದಲ್ಲಿ ಎಲ್ಲ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆಗಸ್ಟ್ 7ರಂದು ಆದೇಶ ಹೊರಡಿಸಿದೆ. ಇದು ಸಂವಿಧಾನದ ವಿಧಿ 14, 19, 21, 29 ಹಾಗೂ 30ರ ಆಶಯಗಳಿಗೆ ವಿರುದ್ಧವಾಗಿದೆ ಎಂದು ಸಂಸ್ಕೃತಿ ಭಾರತಿ ಟ್ರಸ್ಟ್ ಸೇರಿದಂತೆ ವಿವಿಧ ಸಂಘಟನೆಗಳು ಅರ್ಜಿ ಸಲ್ಲಿಸಿವೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (NEP) ಕನ್ನಡ ಭಾಷೆ ಕಲಿಕೆ ಕಡ್ಡಾಯವಿಲ್ಲದಿದ್ದರೂ, ಸರ್ಕಾರ 12ನೇ ತರಗತಿ ಪೂರೈಸಿ ಶಿಕ್ಷಣಕ್ಕಾಗಿ ರಾಜ್ಯದ ಕಾಲೆಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಮಾಡಿದೆ. ಪದವಿ ಹಂತದಲ್ಲಿ ಕನ್ನಡ ಕಡ್ಡಾಯ (Kannada compulsory) ಮಾಡುವುದು ಸರಿಯಲ್ಲ. ಭಾಷೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುತ್ತದೆ. ಆದ್ದರಿಂದ ಪದವಿ ಹಂತದಲ್ಲಿ ಕನ್ನಡ ಕಡ್ಡಾಯ ಮಾಡಿರುವ ಸರ್ಕಾರದ ಆದೇಶವನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಇದನ್ನೂ ಓದಿ:ನಾಮ ಫಲಕದಲ್ಲಿ ಕನ್ನಡ ಕಡ್ಡಾಯಗೊಳಿಸಿ ಬಿಬಿಎಂಪಿ ನೋಟಿಸ್.. ಫಲಿತಾಂಶ ಮಾತ್ರ ಶೂನ್ಯ..