ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಲು ಮುಂದಾಗಿರುವ ಹಿನ್ನೆಲೆ ಆ ಸ್ಥಾನಕ್ಕೆ ಜೆಡಿಎಸ್ ಹಿರಿಯ ಮುಖಂಡ, ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ಮತ್ತೊಮ್ಮೆ ಆ ಹುದ್ದೆ ನೀಡಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ.
ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಇಂದು ರಾತ್ರಿ ಪಕ್ಷದ ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಲಾಯಿತು. ಮೂರು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಬೋಜೇಗೌಡ, ರಮೇಶ್‌ಗೌಡ, ಗೋವಿಂದರಾಜು, ತಿಪ್ಪೇಸ್ವಾಮಿ ಸೇರಿದಂತೆ ಇತರೆ ಮುಖಂಡರು ಭಾಗವಹಿಸಿದ್ದರು.
ಜೆಡಿಎಸ್ ಬೆಂಬಲ ಬಿಜೆಪಿಗೆ ಅನಿವಾರ್ಯ
ವಿಧಾನಪರಿತ್‌ನಲ್ಲಿ ಅಧಿಕ ಸಂಖ್ಯಾಬಲ ಹೊಂದಿದ್ದರೂ ಸಭಾಪತಿ ಸ್ಥಾನಕ್ಕೆ ಅಗತ್ಯ ಇರುವ ಸಂಖ್ಯಾಬಲ ಇಲ್ಲದ ಕಾರಣ ಆಡಳಿತರೂಢ ಬಿಜೆಪಿಗೆ ಜೆಡಿಎಸ್ ಬೆಂಬಲ ಅನಿವಾರ್ಯವಾಗಿದೆ. ಹೀಗಾಗಿ ಮುಂದಿನ ಒಂದೂವರೆ ವರ್ಷಗಳ ಕಾಲ ಜೆಡಿಎಸ್ ಸಭಾಪತಿ ಸ್ಥಾನವನ್ನು ಪಡೆದುಕೊಳ್ಳುವ ಸಂಬಂಧ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿರುವ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರಿಗೆ ಹುದ್ದೆ ನೀಡುವ ಸಂಬಂಧ ಸಭೆಯಲ್ಲಿ ಸದಸ್ಯರು ಸರ್ವಾನುಮತದಿಂದ ಸಹಮತ ವ್ಯಕ್ತಪಡಿಸಿದ್ದಾರೆ.
ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡಲು ದೇವೇಗೌಡರು ಸಹ ಒಪ್ಪಿಗೆ ನೀಡಿದ್ದಾರೆ. ಸಭೆಯಲ್ಲಿ ತೀರ್ಮಾನಿಸಿರುವ ಕುರಿತು ಬಿಜೆಪಿಯೊಂದಿಗೆ ಮತ್ತೊಮ್ಮೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಜೆಡಿಎಸ್‌ಗೆ ಸಭಾಪತಿ ಸ್ಥಾನ ಪಡೆಯುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳ ಜತೆಯೂ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿಗಳು ಸಹ ಬಹುತೇಕ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಜ. 29 ಉಪಸಭಾಪತಿ ಸ್ಥಾನಕ್ಕೆ ಚುನಾವಣೆ
ಜನವರಿ 28ರಿಂದ ಜಂಟಿ ಅಧಿವೇಶನ ಪ್ರಾರಂಭವಾಗಲಿದ್ದು, ಜ. 29ರಂದು ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸಲಾಗುತ್ತದೆ. ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆದ ಬಳಿಕ ಸಭಾಪತಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬಿಜೆಪಿಯೊಂದಿಗೆ ಕೈ ಜೋಡಿಸುವುದರಿಂದ ಕಾಂಗ್ರೆಸ್‌ನ ಆರೋಪಗಳು ಎದುರಿಸಬೇಕಾಗುತ್ತದೆ. ಕಾಂಗ್ರೆಸ್ ಆರೋಪಗಳಿಗೆ ಯಾವ ರೀತಿಯಲ್ಲಿ ತಿರುಗೇಟು ನೀಡಬೇಕು ಎಂಬುದರ ಬಗ್ಗೆ ಮಾತುಕತೆ ನಡೆಸಲಾಯಿತು ಎಂದು ಮೂಲಗಳು ಹೇಳಿವೆ.
75 ಸದಸ್ಯರಿರುವ ವಿಧಾನ ಪರಿಷತ್‌ನಲ್ಲಿ ಸಭಾಪತಿ ಸ್ಥಾನಕ್ಕೆ 39 ಮಂದಿಯ ಬೆಂಬಲ ಅಗತ್ಯವಿದೆ. ಬಿಜೆಪಿ 31, ಕಾಂಗ್ರೆಸ್ 28, ಜೆಡಿಎಸ್ 14 ಮತ್ತು ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಬಿಜೆಪಿ ಸದಸ್ಯರನ್ನು ಸಭಾಪತಿಯನ್ನಾಗಿ ನೇಮಕ ಮಾಡಲು 8 ಸದಸ್ಯರ ಕೊರತೆ ಇದೆ. ಹೀಗಾಗಿ ಜೆಡಿಎಸ್‌ನ ಬೆಂಬಲ ಬಿಜೆಪಿಗೆ ಅನಿವಾರ್ಯ. ಈ ಕಾರಣದಿಂದಾಗಿ ಜೆಡಿಎಸ್‌ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಹುದ್ದೆ ನೀಡಲು ಚರ್ಚೆಗಳು ನಡೆದಿವೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಸವರಾಜ ಹೊರಟ್ಟಿ ಅವರನ್ನು ಹಂಗಾಮಿ ಸಭಾಪತಿಯನ್ನಾಗಿ ಮಾಡಲಾಗಿತ್ತು. ಆದರೆ ರಾಜಕೀಯ ಕಾರಣಾಂತರಗಳಿಂದಾಗಿ ಸಭಾಪತಿ ಹುದ್ದೆಯಿಂದ ಕೆಳಗಿಳಿಸಲಾಯಿತು. ಇದೀಗ ಮತ್ತೊಮ್ಮೆ ಸಭಾಪತಿಯನ್ನಾಗಿ ಮಾಡಲು ಪಕ್ಷವು ತೀರ್ಮಾನಿಸಿದೆ.
ಬಸವರಾಜ ಹೊರಟ್ಟಿ ಪ್ರತಿಕ್ರಿಯೆ: ಸಭೆಯಲ್ಲಿ ಒಂದೇ ಅಜೆಂಡಾದ ಬಗ್ಗೆ ಚರ್ಚೆ ನಡೆಸಲಾಗಿದ್ದು, ಜೆಡಿಎಸ್ ಸಭಾಪತಿ ಸ್ಥಾನ ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ. ನನಗೆ ಮತ್ತೊಮ್ಮೆ ಸಭಾಪತಿ ಸ್ಥಾನ ನೀಡುವ ಕುರಿತು ಚರ್ಚಿಸಿ ನಿರ್ಧರಿಸಲಾಗಿದೆ. ನಲವತ್ತು ವರ್ಷಗಳಿಂದ ರಾಜಕೀಯದಲ್ಲಿದ್ದು, ನನ್ನನ್ನು ಸಭಾಪತಿ ಮಾಡಲು ಸದಸ್ಯರೆಲ್ಲ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆ ಚರ್ಚೆ ನಡೆಸಿದ್ದಾರೆ. ಬಿಜೆಪಿ ಹೈಕಮಾಂಡ್ ಈಗಾಗಲೇ ರಾಜ್ಯ ಬಿಜೆಪಿ ನಾಯಕರಿಗೆ ನಿರ್ದೇಶನ ಕೊಟ್ಟಿದ್ದಾರೆ. ಸಿಎಂ ಯಡಿಯೂರಪ್ಪ ಜೊತೆ ಕೂಡ ನಮ್ಮ ವರಿಷ್ಠರು ಚರ್ಚಿಸಿದ್ದಾರೆ ಎಂದರು.
ಸಭಾಪತಿ ಸ್ಥಾನ ಬಸವರಾಜ ಹೊರಟ್ಟಿಯವರಿಗೆ ನೀಡಲು ಸಭೆಯಲ್ಲಿ ತೀರ್ಮಾನ
ಪರಿಷತ್ ಸದಸ್ಯ ಶ್ರೀಕಂಠೇಗೌಡ ಮಾತನಾಡಿ, ದೇವೇಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಸದಸ್ಯರು ಭಾಗವಹಿಸಿ ಸುದೀರ್ಘವಾಗಿ ಚರ್ಚೆ ಮಾಡಲಾಗಿದೆ. ಸಭಾಪತಿ ಸ್ಥಾನವನ್ನು ಬಸವರಾಜ ಹೊರಟ್ಟಿ ಅವರಿಗೆ ಕೊಡಬೇಕೆಂಬುದರ ಬಗ್ಗೆ ಚರ್ಚಿಸಲಾಗಿದೆ. ಮತ್ತೆ ನಾಳೆ ಸಂಜೆ ಸಭೆ ಸೇರಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಈಗ ರಾಜ್ಯಪಾಲರ ಜಂಟಿ ಅಧಿವೇಶನ ಕರೆಯಲಾಗಿದೆ. ಮತ್ತೆ ಬಜೆಟ್ ಅಧಿವೇಶನ ಇರುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ಕುರಿತು ಯಾವಾಗ ಬರುತ್ತದೆ ಎಂಬುದು ಗೊತ್ತಿಲ್ಲ. ನಮ್ಮ ವರಿಷ್ಠರು ಈ ಕಾಯ್ದೆ ವಿರುದ್ಧ ಇದ್ದಾರೆ, ನೋಡೋಣ. ಇವತ್ತು ಬರೀ ಸಭಾಪತಿ ಸ್ಥಾನದ ಕುರಿತು ಚರ್ಚೆ ನಡೆಸಲಾಯಿತು ಎಂದು ಹೇಳಿದರು.