ಕೆ.ಆರ್.ಪುರ: ಸ್ವಾತಂತ್ರ್ಯ ದಿನಾಚರಣೆ ದಿನದಂದು ಎಲ್ಲಾ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರ ಇಡುವಂತೆ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯಾದ್ಯಕ್ಷ ಸೋರಹುಣಿಸೆ ವೆಂಕಟೇಶ್ ಒತ್ತಾಯಿಸಿದ್ದಾರೆ.
ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಕಛೇರಿ ಮುಂದೆ ಕರ್ನಾಟಕ ದಲಿತ ರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಂಕೇತಿಕ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳು ಕಳೆದರೂ ಜಾತಿ ಎಂಬ ವಿಷಕಾರಿ ಬೀಜವಿನ್ನೂ ಸತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಂಬೇಡ್ಕರ್ ಒಂದು ಜಾತಿಗೆ ಸೀಮಿತವಾಗದೆ ಸಂವಿಧಾನ ರಚಿಸಿ ಸಮಾನತೆಯಿಂದ ಬದುಕಲು ಕಲಿಸಿದ್ದಾರೆ. ಆದ್ರೆ ಸ್ವಾತಂತ್ರ್ಯ ದಿನಾಚರಣೆಯಂದು ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರ ಇಡದೇ ಆಚರಣೆ ಮಾಡುತ್ತಿರುವುದು ಶೋಚನೀಯವಾಗಿದೆ.
ಉತ್ತರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ರಾಜ್ಯದಲ್ಲಿ ಶೇ 50% ರಷ್ಟು ಕಡೆಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಇಟ್ಟು ಆಚರಣೆ ನಡೆಯುತ್ತಿದೆ. ಇದನ್ನು ನಮ್ಮ ರಾಜ್ಯದಲ್ಲೂ ಅನುಸರಿಸಬೇಕು ಎಂದು ಅವರು ಒತ್ತಾಯಿಸಿದರು.
ಗಾಂಧೀಜಿ ಫೋಟೋ ಜೊತೆ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡುವಂತೆ ರಾಷ್ಟ್ರಪತಿ, ಪ್ರಧಾನಮಂತ್ರಿಗಳಿಗೆ, ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗಿದೆ. ಒಂದು ವೇಳೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ಮಾಡಲು ತೀರ್ಮಾನಿಸಿದೆ ಎಂದು ಎಚ್ಚರಿಕೆ ನೀಡಿದರು.