ಬೆಂಗಳೂರು: ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕನ್ನಡ ರಾಜ್ಯೋತ್ಸವ ದಿನದಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿ ರಚಿಸಲಾಗುವುದು. ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡುತ್ತೇವೆ ಎಂದರು.
ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ: 1922 ರಿಂದ ಫಲಪುಷ್ಪ ಪ್ರದರ್ಶನ ನಿರಂತರವಾಗಿ ನಡೆಯುತ್ತಿದೆ. ಪ್ರತಿ ವರ್ಷ ಅತಿ ಹೆಚ್ಚು ಜನರನ್ನು ಆಕರ್ಷಿಸುತ್ತಿದೆ. ಈ ಬಾರಿ ಸ್ವಾತಂತ್ರ್ಯೋತ್ಸವದ ಅಮೃತ ವರ್ಷಾಚರಣೆ ನಿಮಿತ್ತ ಸಂಭ್ರಮ ತುಂಬಿದೆ. ಫಲಪುಷ್ಪ ಪ್ರದರ್ಶನಕ್ಕೆ ವಿಶೇಷ ಕಳೆ ಬಂದಿದೆ. ಮುಂದಿನ 10 ದಿನಗಳ ಕಾಲ ನಿತ್ಯ ಲಕ್ಷಾಂತರ ಜನ ಬರುವ ನಿರೀಕ್ಷೆ ಇದೆ.
ಈ ಬಾರಿ ಡಾ. ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ವಿಶೇಷವಾದ ಪ್ರದರ್ಶನ ಏರ್ಪಟ್ಟಿದೆ. ಹಾಗಾಗಿ ಇನ್ನಷ್ಟು ಜನರನ್ನು ಪ್ರದರ್ಶನ ಆಕರ್ಷಿಸುವ ನಿರೀಕ್ಷೆ ಇದೆ. ತೋಟಗಾರಿಕಾ ಇಲಾಖೆ ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ಅಧಿಕಾರಿಗಳು ಉತ್ತಮವಾಗಿ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಿ ಆನಂದಿಸಬೇಕು ಎಂದು ಹೇಳಿದರು.
ಓದಿ: ಸ್ಯಾಂಡಲ್ವುಡ್ ಯುವರತ್ನ ಪುನೀತ್ಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಘೋಷಣೆ