ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಾನ್ಸೂನ್ ಚುರುಕಾಗಿದೆ. ಆದರೆ ಆಗಸ್ಟ್ 11 ರಿಂದ ರಾಜ್ಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞರಾದ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕುಂದಾಪುರದಲ್ಲಿ 19 ಸೆಂ.ಮೀ, ಕೊಲ್ಲೂರು 18, ಶಿರಾ 17 ಹೊನ್ನಾವರ 15, ಸಿದ್ಧಾಪುರ-ಆಗುಂಬೆಯಲ್ಲಿ 14, ಕಲಬುರಗಿ 2 ಸೆಂ.ಮೀಟರ್ ಮಳೆಯಾಗಿದೆ.
ರಾಜ್ಯದಲ್ಲಿ ಆಗಸ್ಟ್ 12 , 13, 14 ರಂದು ಮಳೆಯ ಪ್ರಮಾಣ ಒಟ್ಟಾರೆ ತಗ್ಗಬಹುದು. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 10(ಇಂದು) ಹಾಗೂ 11(ನಾಳೆ) ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಅಲ್ಲದೆ 12, 13, 14 ರಂದು ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಬಹುದು.
ಉತ್ತರ ಕನ್ನಡ ,ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ನಿರೀಕ್ಷೆ ಇರುವುದರಿಂದ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆ. 11 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಆದರೆ 12,13,14 ರಂದು ಕೆಲವು ಕಡೆ ಮಾತ್ರ ಮಳೆ ಬೀಳಲಿದೆ. ಮಲೆನಾಡಿನ ಜಿಲ್ಲೆಗಳಲ್ಲಿ ಶಿವಮೊಗ್ಗ, ಕೊಡಗು, ಚಿಕ್ಕಮಂಗಳೂರು, ಹಾಸನ ನಾಳೆ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 11 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಬೆಂಗಳೂರಿನಲ್ಲಿ ಆಗಸ್ಟ್ 10 ಹಾಗೂ 11 ರಂದು ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಬಹುದು. ನಾಳೆ ಕೂಡಾ ಮಳೆಯಾಗಲಿದ್ದು, 12,13,14 ರಂದು ಕೆಲವು ಕಡೆ ಮಾತ್ರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಮಾಹಿತಿ ನೀಡಿದರು.