ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿನಿಂದ ಸಂತೃಪ್ತರಾದ 17 ಅನರ್ಹ ಶಾಸಕರ ಪೈಕಿ 16 ಜನ ಇಂದು (ಗುರುವಾರ) ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರುಳೀಧರ್ ರಾವ್ ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಅನರ್ಹ ಶಾಸಕರು ಕಮಲ ಪಾಳೆಯಕ್ಕೆ ಸೇರಿಕೊಳ್ಳಲಿದ್ದಾರೆ.
ಉಪಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಕುರಿತು ಇನ್ನೂ ನಿರ್ಧಾರ ಆಗಿಲ್ಲ. ಪಕ್ಷಕ್ಕೆ ಸೇರ್ಪಡೆಯ ನಂತರ ಈ ಬಗ್ಗೆ ಬಿಜೆಪಿ ವರಿಷ್ಠರು ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. 'ಇಂದು ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದು, ಕಮಲ ಚಿನ್ಹೆಯಡಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಟಿಕೆಟ್ ನೀಡುವ ಸುಳಿವು ಬಿಟ್ಟುಕೊಟ್ಟಿದ್ದಾರೆ.
ಅನರ್ಹ ಶಾಸಕರಾದ ಹೆಚ್ ವಿಶ್ವನಾಥ, ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ, ಶಂಕರ್, ಆನಂದ್ ಸಿಂಗ್, ಪ್ರತಾಪ್ ಗೌಡ ಪಾಟೀಲ್, ಬಿ.ಸಿ ಪಾಟೀಲ್, ಶಿವರಾಂ ಹೆಬ್ಬಾರ್, ನಾರಾಯಣಗೌಡ, ಸೋಮಶೇಖರ್, ಗೋಪಾಲಯ್ಯ, ಬೈರತಿ ಬಸವರಾಜ್, ಮುನಿರತ್ನ, ಎಂ.ಟಿ.ಬಿ ನಾಗರಾಜ್, ಸುಧಾಕರ್ ಮತ್ತು ಶ್ರೀಮಂತ್ ಪಾಟೀಲ್ ಸೇರ್ಪಡೆಗೊಳ್ಳಲಿದ್ದಾರೆ.
16 ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡರೂ ರೋಷನ್ ಬೇಗ್ ಅವರ ಹೆಸರು ಬಿಜೆಪಿ ಸೇರ್ಪಡೆಗೊಳ್ಳುವವರ ಪಟ್ಟಿಯಲ್ಲಿ ಇಲ್ಲ. ರೋಷನ್ ಬೇಗ್ ಅವರ ಪುತ್ರನ ಜೊತೆ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದರು. ಆದರೆ, ಬಿಜೆಪಿ ರಾಜ್ಯ ಘಟಕ ಇದಕ್ಕೆ ಇನ್ನೂ ಹಸಿರು ನಿಶಾನೆ ಕೊಟ್ಟಿಲ್ಲ.