ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಪಟ್ಟ ಯಾರಿಗೆ ನೀಡಿದರೂ ನಾವು ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾವು ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ಯಾರಿಗಾದರೂ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡಲಿ. ನಮ್ಮ ಅಭಿಪ್ರಾಯವನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ತಿಳಿಸಿದ್ದೇವೆ. ಈ ವಾರದೊಳಗೆ ಅವರು ತೀರ್ಮಾನ ಕೈಗೊಳ್ಳಬಹುದು ಎಂದು ತಿಳಿಸಿದರು.
ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹಾಗೂ ಎಂ.ಬಿ.ಪಾಟೀಲ್ ಹೆಸರು ಮುಂಚೂಣಿಯಲ್ಲಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ವಾಸ್ತವಾಂಶ ನಮಗೆ ಯಾರಿಗೂ ಗೊತ್ತಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಎಲ್ಲರ ಅಭಿಪ್ರಾಯ ಕೇಳಿದ್ದಾರೆ ಎಂದರು.
ಪಕ್ಷದಲ್ಲಿನ ಬಣ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿ, ಭಿನ್ನಾಭಿಪ್ರಾಯ ಸಹಜವಾಗಿ ಪಕ್ಷಗಳಲ್ಲಿ ಇರುತ್ತದೆ. ಆದರೆ ನಾವೆಲ್ಲಾ ಜೊತೆಯಲ್ಲಿ ಕೆಲಸ ಮಾಡುತ್ತೇವೆ. ಹೈಕಮಾಂಡ್ ಯಾರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದರೂ, ನಾವು ಜೊತೆಯಲ್ಲಿ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.