ಬೆಂಗಳೂರು: ಮುಂದಿನ ಐದು ದಿನ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ (yellow alert) ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಸದ್ಯಕ್ಕೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದ್ದು, ಇಂದೂ ಕೂಡ ಕೆಲವೆಡೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಇದೇ ತಿಂಗಳ 8 ರಿಂದ 11ರವರೆಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಜುಲೈ 9 ರಿಂದ 11ರವರೆಗೆ ಶಿವಮೊಗ್ಗ, ಚಿಕ್ಕ ಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ (yellow alert) ಘೋಷಿಸಲಾಗಿದೆ ಎಂದು ಅವರು ತಿಳಿಸಿದರು.
ಈಗಿನ ಮಾಹಿತಿಯಂತೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 15 ಸೆಂ.ಮೀ, ಭಾಗಮಂಡಲದಲ್ಲಿ 14 ಸೆಂ.ಮೀ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 7 ಸೆಂ.ಮೀ ಮಳೆ ದಾಖಲಾಗಿದೆ.