ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಸಭೆ ನಡೆಸಿ, ಮಹತ್ವದ ವಿಚಾರಗಳ ಕುರಿತು ಚರ್ಚಿಸಲಾಯಿತು.
ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಮಿತಿಯ ಅಧ್ಯಕ್ಷರಾದ ಕೇಂದ್ರದ ಮಾಜಿ ಸಚಿವ ಕೆ. ರೆಹಮಾನ್ ಖಾನ್, ಸದಸ್ಯರಾದ ಕೆ.ಬಿ. ಕೋಳಿವಾಡ, ರಾಣಿ ಸತೀಶ್, ಜಲಜಾ ನಾಯಕ್, ನಿವೇದಿತ್ ಆಳ್ವಾ, ಮಲ್ಲಾಜಮ್ಮ, ಸೈಯದ್ ಜಿಯಾವುಲ್ಲಾ ಹಾಜರಾಗಿದ್ದರು. ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಹಾಗೂ ಮುಂಬರುವ ದಿನಗಳಲ್ಲಿ ಈ ರೀತಿಯ ಚಟುವಟಿಕೆಗಳಲ್ಲಿ ಹೆಚ್ಚು ಜನ ಭಾಗಿಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.
ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಇತಿಹಾಸವಿದೆ. ಇಂತಹ ಪಕ್ಷದ ವಿರುದ್ಧ ಹಗುರವಾಗಿ ಹೇಳಿಕೆ ನೀಡುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಿದೆ. ಪಕ್ಷದ ವಿರುದ್ಧ ಸಾಕಷ್ಟು ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು. ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಬಿಡಲು ಮುಂದಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರಿಗೆ ನೋಟಿಸ್ ಜಾರಿ ಮಾಡಿ ತಮ್ಮ ನಿಲುವನ್ನು ಪಕ್ಷದ ವೇದಿಕೆಯಲ್ಲಿ ತಿಳಿಸುವಂತೆ ಸೂಚಿಸಲಾಯಿತು.
ಇನ್ನು ಮುಂಬರುವ ದಿನಗಳಲ್ಲಿ ಪಕ್ಷದ ಶಿಸ್ತು ಪಾಲನಾ ಸಮಿತಿ ಕೈಗೊಳ್ಳುವ ತೀರ್ಮಾನ ಪಕ್ಷ ವಿರೋಧಿಗಳಿಗೆ ಸೂಕ್ತ ಪಾಠವಾಗಬೇಕು. ಪಕ್ಷ ಹಾಗೂ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.