ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜನವರಿ 5ರಿಂದ ಮೂರು ದಿನಗಳ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ವಿವಿಧ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ.
ಜನವರಿ 5ರಂದು ಸಂಜೆ ಬೆಂಗಳೂರಿನ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ತೆರಳುವ ಅವರು ಜನವರಿ 6ರಂದು ಬಂಟ್ವಾಳದಲ್ಲಿ ನಡೆಯುವ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಬಂಟ್ವಾಳದ ಬಿ.ಸಿ.ರಸ್ತೆಯಲ್ಲಿರುವ ಸಾಗರ ಆಡಿಟೋರಿಯಂನಲ್ಲಿ ಸಭೆ ನಡೆಯಲಿದ್ದು, ಮೈಸೂರು ವಿಭಾಗದ ಕಾಂಗ್ರೆಸ್ ಮುಖಂಡರು ಇದರಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ರಾಜ್ಯದ ಸ್ಥಿತಿ ದೇವರೇ ಗತಿ! ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ಟ್ವೀಟ್
ಮುಖಂಡರೊಂದಿಗೆ ಪಕ್ಷ ಸಂಘಟನೆ, ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವುದು, ಕರಾವಳಿ ಭಾಗದಲ್ಲಿ ಕಾಂಗ್ರೆಸ್ಗೆ ಎದುರಾಗುವ ಹಿನ್ನಡೆ ತಡೆಯುವುದು ಹೇಗೆ? ಎಂಬ ವಿಚಾರಗಳ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಲಿದ್ದಾರೆ. ಇದಾದ ನಂತರ ಜನವರಿ 7ರಂದು ಬೆಳಗ್ಗೆ 11ಕ್ಕೆ ಮಂಗಳೂರಿನಿಂದ ಹೊರಟು ಬೆಂಗಳೂರು ತಲುಪಲಿದ್ದಾರೆ.
ಕಳೆದ ತಿಂಗಳು ನಿರಂತರವಾಗಿ ಉತ್ತರ ಕರ್ನಾಟಕದ ಕಲ್ಯಾಣ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಪ್ರವಾಸ ಕೈಗೊಂಡು ಪಕ್ಷದ ಸಂಘಟನೆ ಹಾಗೂ ಇತರ ವಿಚಾರಗಳ ಕುರಿತು ಡಿಕೆಶಿ ಸಭೆ ನಡೆಸಿದ್ದರು.