ಬೆಂಗಳೂರು : ನಗರದ ಪ್ರಮುಖ ಮಾರ್ಗವೊಂದರ ವೈಟ್ ಟ್ಯಾಪಿಂಗ್ ಕಾರ್ಯ ಉತ್ತಮ ಪ್ರಗತಿಯಲ್ಲಿದೆ. ಸಾರ್ವಜನಿಕರಿಗೆ ದೊಡ್ಡ ಮಟ್ಟದಲ್ಲಿ ಕಾಡುತ್ತಿದ್ದ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಬೆಂಗಳೂರಿನ ಹೊರ ವರ್ತುಲ ರಸ್ತೆ ಸದಾ ದಟ್ಟಣೆಯಿಂದ ಕೂಡಿರುತ್ತದೆ. ಮಾಹಿತಿ ತಂತ್ರಜ್ಞಾನ ಹಾಗೂ ಬಹುರಾಷ್ಟ್ರೀಯ ಕಂಪನಿಗಳು ಹೆಚ್ಚಾಗಿ ಇರುವ ನಗರದ ನಾಗವಾರ, ಥಣಿಸಂದ್ರ, ಹೆಗಡೆ ನಗರ ಮೂಲಕ ರೇವಾ ಕಾಲೇಜಿಗೆ ತೆರಳುವ ಮಾರ್ಗದ ವೈಟ್ ಟ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿದೆ. ರಸ್ತೆ ಗುಂಡಿಯಿಂದಾಗಿ ಉಂಟಾಗುತ್ತಿದ್ದ ಸಂಚಾರ ದಟ್ಟಣೆ ಸಮಸ್ಯೆಗೆ ದೊಡ್ಡ ಪರಿಹಾರ ಸಿಕ್ಕಂತಾಗಿದೆ.
ವೈಟ್ ಟ್ಯಾಪಿಂಗ್ ಕಾಮಗಾರಿಯ ಶೇ.50ರಷ್ಟು ಕಾರ್ಯ ಪೂರ್ಣಗೊಂಡಿದೆ. ಆದಷ್ಟು ಶೀಘ್ರವೇ ಸಂಪೂರ್ಣ ರಸ್ತೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಒಟ್ಟು 9.55 ಕಿ.ಮೀ ಉದ್ದದ ಮಾರ್ಗದಲ್ಲಿ ವೈಟ್ ಟ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿದೆ. 64.18 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.
ರಸ್ತೆಗುಂಡಿ ಹಾಗೂ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಕಾರ್ಯ ಆಗಲಿದೆ. ಮುಂದಿನ ಮೂರು ತಿಂಗಳೊಳಗಾಗಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಇದಾದ ಬಳಿಕ ಈ ಪ್ರಮುಖ ಮಾರ್ಗದಲ್ಲಿ ನಿತ್ಯ ಸಾವಿರಾರು ವಾಹನ ನಿರಾತಂಕವಾಗಿ ಸಾಗಲಿವೆ. ಬಹು ಸಮಯದಿಂದ ಜನ ಎದುರಿಸುತ್ತಿದ್ದ ದೊಡ್ಡ ಸಮಸ್ಯೆಗೆ ಈಗ ಪರಿಹಾರ ಸಿಕ್ಕಂತಾಗಿದೆ ಎಂದು ತಿಳಿಸಿದ್ದಾರೆ.