ಬೆಂಗಳೂರು: ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ಮತ್ತು ಅನುಮತಿ ಪಡೆಯಲು ದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಮಾಡುವ ಬಗ್ಗೆ ಇಂದು ವರಿಷ್ಠರ ಬಳಿ ಚರ್ಚಿಸುವ ಸಾಧ್ಯತೆ ಇದೆ. ಕರ್ನಾಟಕದ ಬಿಜೆಪಿ ಮಹಾನಾಯಕ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ 8 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಿದ್ದಾರೆ.
ಇಂದು ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಉನ್ನತ ನಾಯಕರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಸಮಾಲೋಚಿಸುವ ಸಾಧ್ಯತೆಗಳಿವೆ. ನಿನ್ನೆಯೇ ದೆಹಲಿ ತಲುಪಿರುವ ಸಿಎಂ ಬೊಮ್ಮಾಯಿ, ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮೇಕೆದಾಟು ಮತ್ತು ಕಳಸಾ ಬಂಡೂರಿ ಯೋಜನೆಗೆಳಿಗೆ ಹಸಿರು ನಿಶಾನೆ ತೋರುವಂತೆ ಮನವಿ ಮಾಡಿದ್ದಾರೆ. ಇಂದು ಕೂಡಾ ಅವರು ಹಲವು ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ.
ವರಿಷ್ಠರ ಭೇಟಿಗೆ ಇನ್ನೂ ಅಪಾಯಿಂಟ್‌ಮೆಂಟ್ ಸಿಕ್ಕಿಲ್ಲ: ದೆಹಲಿಯಲ್ಲಿ ವಿವಿಧ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಾನು ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ದೆಹಲಿಗೆ ಇಲ್ಲಿಗೆ ಬಂದಿದ್ದೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ. ಅವರೊಂದಿಗಿನ ಸಭೆಯಲ್ಲಿ ಪಕ್ಷ ಸಂಘಟನೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.
ಆದರೆ, ಪಕ್ಷದ ವರಿಷ್ಠರ ಜತೆಗಿನ ಸಭೆಗೆ ಇನ್ನೂ ಅಪಾಯಿಂಟ್‌ಮೆಂಟ್ ಸಿಕ್ಕಿಲ್ಲ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆಗೆ ಮುಂದಾಗಬೇಕೇ ಎಂಬ ತೀರ್ಮಾನ ವರಿಷ್ಠರ ಸಭೆಯ ಬಳಿಕವೇ ಗೊತ್ತಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಾನೂನು ಎಲ್ಲರಿಗೂ ಒಂದೇ: ಹಿಜಾಬ್ ಮತ್ತು ಹಲಾಲ್ ವಿಷಯಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ದೈವಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಆಚರಿಸುವುದು ಅವರವರಿಗೆ ಬಿಟ್ಟ ವಿಚಾರ, ಆದರೆ ಕಾನೂನು ಎಲ್ಲರಿಗೂ ಒಂದೇ ಎಂದರು. ಕಾನೂನು ಎಲ್ಲರಿಗೂ ಒಂದೇ, ಎಲ್ಲರೂ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ನಮ್ಮ ಆದ್ಯತೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಇದಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸುವುದಾಗಿ ಹೇಳಿದರು.
ಅಷ್ಟೇ ಅಲ್ಲ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಜಿಎಸ್‌ಟಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ನಿರ್ಧರಿಸಿದ್ದೇನೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಗೊಳ್ಳಿ ರಾಯಣ್ಣ ಶಾಲೆಯನ್ನು ಸೈನಿಕ ಶಾಲೆಯಾಗಿ ಅಂಗೀಕರಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಇದೇ ವೇಳೆ ಸಿಎಂ ಸ್ಪಷ್ಟಪಡಿಸಿದರು.
ಇದನ್ನು ಓದಿ:ಭದ್ರಾ ಮೇಲ್ದಂಡೆ - ರಾಷ್ಟ್ರೀಯ ಯೋಜನೆಯಾಗಿ ಘೋಷಣೆ: ಗಜೇಂದ್ರ ಸಿಂಗ್ ಶೇಖಾವತ್ ಭರವಸೆ