ಬೆಂಗಳೂರು: ಕುರುಬ ಸಮುದಾಯದ ವಿವಿಧ ಮುಖಂಡರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು.
ಕುರುಬ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಸಚಿವ ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಎರಡು ದಿನಗಳ ಹಿಂದೆ ಬೃಹತ್ ಸಮಾವೇಶ ನಡೆಸಿದ್ದರು. ಈ ವೇಳೆ ಕುರುಬರಿಗೆ ಮೀಸಲಾತಿ ಸೇರಿದಂತೆ ಹಲವು ವಿಚಾರಗಳ ಕುರಿತು ನಿರ್ಣಯಗಳನ್ನು ಕೈಗೊಂಡಿದ್ದರು.
ಕುರುಬ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಕಳೆದ ವಾರ 9 ಶಾಸಕರು ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ಪ್ರತಿಭಟಿಸಿದ್ದರು. ಇತ್ತೀಚಿನ ದಿನಗಳಲ್ಲಿ ಕುರುಬ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರ ಬಹು ಚರ್ಚಿತವಾಗಿದ್ದು, ಈ ಸಂದರ್ಭ ಮುಂದಿನ ದಿನಗಳಲ್ಲಿ ಸದನದ ಒಳಗೆ ಹಾಗೂ ಹೊರಗೆ ಸಮುದಾಯದ ಪರವಾಗಿ ಹೋರಾಟ ನಡೆಸುವಂತೆ ಸಿದ್ದರಾಮಯ್ಯ ಅವರಿಗೆ ಕುರುಬ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ.
ಇದಕ್ಕೆ ಸ್ಪಂದಿಸಿರುವ ಸಿದ್ದರಾಮಯ್ಯ, ನಾನು ಯಾವತ್ತೂ ಕುರುಬ ಸಮುದಾಯದ ಪರವಾದ ಹೋರಾಟಕ್ಕೆ ಮುಂಚೂಣಿಯಲ್ಲಿ ನಿಲ್ಲುತ್ತೇನೆ. ಮೀಸಲಾತಿ ನೀಡುವ ವಿಚಾರದಲ್ಲಿಯೂ ನನ್ನ ತಕರಾರಿಲ್ಲ. ಎಲ್ಲ ರೀತಿಯಲ್ಲೂ ನಿಮ್ಮ ಬೆಂಬಲಕ್ಕೆ ನಿಂತು, ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡುತ್ತೇನೆ ಎಂದು ಸಮುದಾಯದ ಮುಖಂಡರಿಗೆ ಭರವಸೆ ನೀಡಿದರು.
ಓದಿ: ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಅಧಿಕೃತ ಘೋಷಣೆ
ಮನವೊಲಿಕೆ: ಎರಡು ದಿನಗಳ ಹಿಂದೆ ನಗರದ ಅರಮನೆ ಮೈದಾನದಲ್ಲಿ ನಡೆದ ಕುರುಬ ಮೀಸಲಾತಿ ಹೋರಾಟ ಸಮಿತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿರಲಿಲ್ಲ. ಹೋರಾಟಕ್ಕೆ ಬೆಂಬಲವಿದೆ, ಆದರೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ದೂರವೇ ಉಳಿದಿದ್ದರು. ಈ ಹಿನ್ನೆಲೆ, ಸಿದ್ದರಾಮಯ್ಯ ಅವರನ್ನು ಮನವೊಲಿಸುವ ಪ್ರಯತ್ನಕ್ಕೂ ಕೆಲ ಮುಖಂಡರು ಇಂದು ಆಗಮಿಸಿದ್ದರು.