ಬೆಂಗಳೂರು: ಮುಂದಿನ ತಿಂಗಳು 14 ರಂದು ತೆರವಾಗುವ ವಿಧಾನಪರಿಷತ್‌ನ ಏಳು ಸ್ಥಾನಗಳ ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಚುನಾವಣಾಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರನ್ನು ನಿಯೋಜಿಸಲಾಗಿದೆ. ವಿಧಾನಸಭೆಯ ಉಪಕಾರ್ಯದರ್ಶಿ ಬಿ.ಎಸ್.ಮಹಾಲಿಂಗೇಶ್ ಅವರನ್ನು ಸಹಾಯಕ ಚುನಾವಣಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಚುನಾವಣೆಗೆ ಸ್ಪರ್ಧಿಸುವವರು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ. ಸಾರ್ವತ್ರಿಕ ರಜೆ ದಿನದಂದು ನಾಮಪತ್ರಗಳನ್ನು ಸ್ವೀಕರಿಸುವುದಿಲ್ಲ. ಮೇ.24 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ. ಅಭ್ಯರ್ಥಿಗೆ ಸೂಚಕರಾಗಿ ಕನಿಷ್ಠ 10 ಮಂದಿ ಹಾಲಿ ಶಾಸಕರು ಸಹಿ ಮಾಡಿರಬೇಕು.
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ನಾಮಪತ್ರದೊಂದಿಗೆ 5 ಸಾವಿರ ರೂ. ಮತ್ತು ಇತರ ಅಭ್ಯರ್ಥಿಗಳು 10 ಸಾವಿರ ರೂ. ಠೇವಣಿ ಇಡಬೇಕು ಎಂದು ಅಧಿಸೂಚನೆಯಲ್ಲಿ ಉಲ್ಲೇಖ ಮಾಡಲಾಗಿದೆ. ನಾಮಪತ್ರ ಸಲ್ಲಿಕೆಗೆ ಮೇ 24 ರಂದು ಕೊನೆಯ ದಿನವಾಗಿದೆ. ಮೇ 25ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೇ 27 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಜೂನ್ 3 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
ಇದನ್ನು ಓದಿ:ಧಾರಾಕಾರ ಮಳೆಗೆ ನದಿಯಂತಾದ ರಸ್ತೆಗಳು: ಬೆಂಗಳೂರಲ್ಲಿ ಎಲ್ಲೆಲ್ಲೂ ಟ್ರಾಫಿಕ್ ಜಾಮ್