ಬೆಂಗಳೂರು: ಇಸ್ಲಾಂ ಧರ್ಮೀಯರ ವಿರುದ್ಧ ದ್ವೇಷಪೂರಿತ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕರು, ಸಂಸದರ ಸೇರಿದಂತೆ ಇತರರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ನಿವಾಸಿ ಮೊಹಮ್ಮದ್ ಖಲೀವುಲ್ಲಾ ಎಂಬುವರು ಈ ಕುರಿತಂತೆ ಅರ್ಜಿ ಸಲ್ಲಿಸಿದ್ದಾರೆ.
ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ, ಕೆ.ಎಸ್ ಈಶ್ವರಪ್ಪ, ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ.ರೇಣುಕಾಚಾರ್ಯ, ಸಿ.ಟಿ.ರವಿ, ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ರಿಷಿಕುಮಾರ್ ಸ್ವಾಮೀಜಿ, ಚಕ್ರವರ್ತಿ ಸೂಲಿಬೆಲೆ ಹಾಗೂ ಪ್ರಮೋದ್ ಮುತಾಲಿಕ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ, ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ, ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಬಿಜೆಪಿ ನಾಯಕರನ್ನು ಪ್ರತಿವಾದಿಯಾಗಿ ಹೆಸರಿಸಲಾಗಿದೆ.
ಅಲ್ಲದೇ, ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರು ಉದ್ದೇಶಪೂರ್ವಕವಾಗಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಪದೇ ಪದೆ ಪ್ರಚೋದನಾಕಾರಿ ಮತ್ತು ದ್ವೇಷಪೂರಿತ ಭಾಷಣ ಮಾಡುತ್ತಿದ್ದಾರೆ. ಆ ಮೂಲಕ ಸಮಾಜದ ಸಾಮರಸ್ಯ ಕದಡಲು ಹಾಗೂ ಶಾಂತಿ ಕೆಡಿಸಲು ಪ್ರಯತ್ನಿಸುತ್ತಿದ್ದಾರೆ.
ಸಮಾಜದಲ್ಲಿ ಕೋಮು ದ್ವೇಷ ಹರಡುವುದನ್ನು ತಡೆಯಲು ತೆಶೇನ್ ಪುನವಲ್ಲಾ ವರ್ಸಸ್ ಕೇಂದ್ರ ಸರ್ಕಾರ ನಡುವಿನ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಆ ಪ್ರಕಾರ ಧಾರ್ಮಿಕ ಸೌಹಾರ್ದತೆ ಕದಡುತ್ತಿರುವ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಕೋರಿ ಮಾರ್ಚ್ 28ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಪತ್ರ ನೀಡಿದ್ದರೂ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.
ಆದ್ದರಿಂದ, ಅರ್ಜಿಯಲ್ಲಿ ಪ್ರತಿವಾದಿಯಾಗಿ ಹೆಸರಿಸಿರುವ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಬೇಕು. ಕ್ರಮ ಜರುಗಿಸದೇ ಕರ್ತವ್ಯ ಲೋಪ ಎಸಗಿರುವ ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಸುಪ್ರೀಂ ನಿರ್ದೇಶನದಂತೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಇದನ್ನೂ ಓದಿ: ಶೀಘ್ರವೇ ವೃದ್ಧರು, ವಿಕಲಚೇತನ ಭಕ್ತರಿಗೆ ತಿಮ್ಮಪ್ಪನ ವಿಶೇಷ ದರ್ಶನ